ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಪುಂಜಾಲಕಟ್ಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಿ ನಿವಾಸಿ, ಇಲ್ಲಿನ ಹರ್ಷಿತ್ ಸರ್ವಿಸ್ ಸ್ಟೇಷನ್ ಮಾಲೀಕ ಪೂವಪ್ಪ ಶೆಟ್ಟಿ (45) ಎಂದು ಗುರುತಿಸಲಾಗಿದೆ.
ಬಂಟ್ವಾಳ-ಕಡೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಕುದ್ರೋಟಿಕಟ್ಟೆ ತಿರುವಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ಲಾರಿ ಇವರ ಬೈಕಿಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್ ಧರಿಸದ ಇವರ ತಲೆ ಭಾಗಕ್ಕೆ ತೀವ್ರ ಸ್ವರೂಪದ ಗಾಯಗೊಂಡು ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಮನೆಗೆ ಸುಮಾರು 2 ಕಿ.ಮೀ. ದೂರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಹಿಂದೆಯೂ ಇಲ್ಲಿನ ತಿರುವು ರಸ್ತೆಯಲ್ಲಿ ಹಲವು ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ. ಪುಂಜಾಲಕಟ್ಟೆ ಠಾಣಾಧಿಕಾರಿ ಲತೇಶ್ ಕುಮಾರ್ ನೇತೃತ್ವದ ಪೊಲೀಸರು ಧಾವಿಸಿ ರಸ್ತೆಯಲ್ಲಿ ಸಂಚಾರ ಸುಗಮಗೊಳಿಸಿದರು.
