ಬಂಟ್ವಾಳ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಳೆದ ಸಾಲಿನಲ್ಲಿ ಸರ್ವ ಶಿಕ್ಷಾ ಅಭಿಯಾನ ಯೋಜನೆಯಡಿ ಒಟ್ಟು ರೂ 50 ಕೋಟಿ ಮೊತ್ತದ ಅನುದಾನ ವಿನಿಯೋಗಿಸಲಾಗಿದೆ. ಇದರಿಂದಾಗಿ ಸರ್ಕಾರಿ ಶಾಲೆಯಲ್ಲಿ ಮೂಲ ಸೌಕರ್ಯ ಸಹಿತ ಗುಣಮಟ್ಟದ ಶಿಕ್ಷಣ ನೀಡಿದಾಗ ಮಕ್ಕಳ ಸಂಖ್ಯೆ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.
ತಾಲ್ಲೂಕಿನ ಬಾಳ್ತಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸಂಜೆ ನಡೆದ ವಾರ್ಷಿಕೋತ್ಸವ ಮತ್ತು ನೂತನ ರಂಗ ಮಂದಿರ ಉದ್ಘಾಟಿಸಿ ಅವರು ಮಾತನಾಡಿದರು. ಈ ಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಕೊಳವೆ ಬಾವಿ ಸಹಿತ ಸರ್ಕಾರಿ ಪ್ರೌಢಶಾಲೆ ಮಂಜೂರಾತಿಗೆ ಶ್ರಮಿಸುವುದಾಗಿ ಅವರು ಭರವಸೆ ನೀಡಿದರು.
2btl-Balthila
ಮುಖ್ಯಶಿಕ್ಷಕಿ ಜಯಶ್ರೀ ಎಸ್.ಔದಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠಲ, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮೀ ಗೋಪಾಲ ಆಚಾರ್ಯ ಮತ್ತಿತರರು ಶುಭ ಹಾರೈಸಿದರು.
ಇದೇ ವೇಳೆ ಸರ್ಕಾರಿ ಪ್ರೌಢಶಾಲೆ ಮಂಜೂರಾತಿಗೊಳಿಸುವಂತೆ ಆಗ್ರಹಿಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಮುಖ್ಯಶಿಕ್ಷಕಿ ಜಯಶ್ರೀ ಎಸ್.ಔದಿ ಸಹಿತ ಶಿಕ್ಷಕರಾದ ಸಂತೋಷ್ ಕುಮಾರ್, ಪ್ರೇಮ ಕುಮಾರಿ, ಕ್ಷಮಾ ಕುಮಾರಿ, ಮಲ್ಲಿಕಾ, ಮಮತಾ ಶೆಟ್ಟಿ, ಸುನಿತಾ, ಶಶಿಕಲಾ, ರೇಶ್ಮಾ, ಜಯಶ್ರೀ ಮತ್ತಿತರರನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಶೆಟ್ಟಿ, ಸಮೂಹ ಸಂಪನ್ಮೂಲ ಅಧಿಕಾರಿ ಉದಯ ಕುಮಾರ್ ಮತ್ತಿತರರು ಇದ್ದರು. ಗ್ರಾಮ ಪಂಚಾಯಿತಿ ಸದಸ್ಯ ವಸಂತ ಸಾಲ್ಯಾನ್ ಸ್ವಾಗತಿಸಿ, ವಾರ್ಷಿಕೋತ್ಸವ ಸಮಿತಿ ಅಧ್ಯಕ್ಷ ಶಿವಶಂಕರ ಭಟ್ ಪ್ರಾಸ್ತಾವಿಕ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ಪಿ.ಎಸ್.ಮೋಹನ್ ವಂದಿಸಿದರು. ಕೃಷ್ಣಪ್ಪ ಪೂಜಾರಿ ದೋಟ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕ ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *