ಬೆಂಗಳೂರು: ಮಣ್ಣಿನ ದಿಬ್ಬ ಕುಸಿದು ಉತ್ತರ ಪ್ರದೇಶ ಮೂಲದ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ಯಿಯ ಇಮ್ಮಡಿಹಳ್ಳಿಯಲ್ಲಿ ಕೆಸಿ ವ್ಯಾಲಿ ಎಂಬ ಕಟ್ಟಡ ನಿರ್ಮಾಣದ ವೇಳೆ ಈ ಘಟನೆ ನಡೆದಿದೆ.

ಕಟ್ಟಡ ನಿರ್ಮಾಣಕ್ಕೆಂದು ಮಣ್ಣು ಅಗೆಯುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಮಣ್ಣು ಕುಸಿದಿದೆ. ಈ ವೇಳೆ ಅಲ್ಲಿ ಕೆಲಸ ಮಾಡುತ್ತಿದ್ದ ಸಂದೀಪ್(20) ಮತ್ತು ಅಖಿಲೇಶ್ ಯಾದವ್ (21) ಎಂಬ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಸ್ಥಳದಲ್ಲಿದ್ದ ಎಂಜಿನಿಯರ್ ಉಮಾಶಂಕರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ ಕಾರ್ಮಿಕರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು. ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಈ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಆದ್ರೆ ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ.

ಕಾರ್ಮಿಕರಿಗೆ ಭಾನುವಾರವೂ ರಜೆ ನೀಡದೇ ದುಡಿಸಿಕೊಳ್ಳಲಾಗುತ್ತಿತ್ತು ಎಂದು ತಿಳಿದು ಬಂದಿದ್ದು, ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಆಳವಾಗಿ ಗುಂಡಿ ಅಗೆಯುತ್ತಿದ್ದಾಗ ಮೇಲಿನಿಂದ ಮಣ್ಣು ಕಾರ್ಮಿಕರ ಮೇಲೆ ಕುಸಿದಿದೆ. ಘಟನೆ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕಾಮಗಾರಿ ಗುತ್ತಿಗೆ ಪಡೆದಿದ್ದ ಕಾಂಟ್ರಾಕ್ಟರ್ ಮತ್ತು ಜಾಗದ ಮಾಲೀಕನ ವಿರುದ್ಧ ನಿರ್ಲಕ್ಷ್ಯ ವಹಿಸಿ ಇಬ್ಬರ ಸಾವಿಗೆ ಕಾರಣರಾದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

By Suddi9

Leave a Reply

Your email address will not be published. Required fields are marked *