IMG_20180531_212044

ಕೋಲಾರ: ಕಳೆದೆರಡು ದಿನಗಳಿಂದ ಮಂಗಳೂರು, ಉಡುಪಿಯಲ್ಲಿ ವ್ಯಾಪಕ ಮಳೆಯಿಂದಾಗಿ ಪ್ರಾಣ ಹಾನಿ ಹಾಗೂ ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಈ ರೀತಿ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಜಿ. ಸತ್ಯವತಿ ತಿಳಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಉತ್ತಮ ಮಳೆಯಾಗುತ್ತಿದೆ. ಅತಿ ಹೆಚ್ಚು ಮಳೆಯಾದರೆ ಪ್ರವಾಹ ಉಂಟಾಗುತ್ತದೆ. ಇದಕ್ಕೆ ಕಾರಣ ಸರಿಯಾಗಿ ಚರಂಡಿಗಳು, ಡ್ರೈಮೇಜ್‍ಗಳು ಹಾಗೂ ರಾಜ ಕಾಲುವೆಗಳನ್ನು ನಿರ್ವಹಿಸದಿರುವುದು. ಇವುಗಳಲ್ಲಿ ಹೂಳು ತುಂಬಿಕೊಂಡಿದ್ದು, ಸರಾಗವಾಗಿ ನೀರು ಹರಿಯಲು ಅವಕಾಶವಾಗದೆ ನೀರು ಮನೆಗಳಿಗೆ ನುಗ್ಗುತ್ತದೆ. ಆದ್ದರಿಂದ ಸಂಬಂಧಪಟ್ಟ ನಗರಸಭೆಗಳು, ಗ್ರಾಮ ಪಂಚಾಯಿತಿಗಳು ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ 24*7 ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗುವುದು. ಸಾಮಾಜಿಕ ಮಾಧ್ಯಮಗಳಲ್ಲಿ ಮಳೆಯಿಂದ ಸಂಭವಿಸುವ ಅನಾಹುತಗಳನ್ನು ಕಡಿಮೆ ಮಾಡಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಸಿಡಿಲಿನಿಂದ ತಪ್ಪಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಲಾಗುವುದು. ಶಾರ್ಟ್ ಸಕ್ಯೂಟ್‍ನಿಂದ ಆಗುವ ಅಗ್ನಿ ಅನಾಹುತಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಗ್ನಿಶಾಮಕ ದಳ ಕ್ರಿಯಾಶೀಲವಾಗಿರಬೇಕು ಎಂದರು.

ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸುವುದು. ಅಗತ್ಯ ಸಂಖ್ಯೆಯ ಆಂಬುಲೆನ್ಸ್‍ಗಳ ವ್ಯವಸ್ಥೆ, ಹಾಗೂ ತುರ್ತು ಸಂದರ್ಭದ ಅಗತ್ಯವಾದ ಔಷಧಿಗಳನ್ನು ಕ್ರೂಢೀಕರಿಸಿ ಇಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗಗಳು ಹಾಗೂ ಮಳೆಗಾಲದಲ್ಲಿ ಬರುವ ಡೆಂಗ್ಯೂ, ಮಲೇರಿಯಾದಂತಹ ಖಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಆರೋಗ್ಯ ಇಲಾಖೆಯವರು ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಸ್ ಲತಾಕುಮಾರಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ತಾಲ್ಲೂಕು ಪಂಚಾಯತ್ ನ  ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

 

By Suddi9

Leave a Reply

Your email address will not be published. Required fields are marked *