ಬಂಟ್ವಾಳ: ಕರೋನಾ ಆತಂಕದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಯಶಸ್ಸಿಗೆ ಸಹಕರಿಸಿದ ಇತರ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಶಿಕ್ಷಕರಿಗೆ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿಯ ಅಧ್ಯಕ್ಷ ಪ್ರಕಾಶ್ ಅಂಚನ್ ಅಭಿನಂದನೆ ಸಲ್ಲಿಸಿದ್ದಾರೆ.

ಕರೋನಾ ಮಹಾಮಾರಿಯಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಬೇಕೆ ಬೇಡವೇ ಎನ್ನುವ ಗೊಂದಲ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿತ್ತು. ಪರೀಕ್ಷೆಗೆ ಯಾವ ರೀತಿ ಸಿದ್ದತೆ ಮಾಡಬೇಕು ಎನ್ನುವ ಸವಾಲು ಕೂಡ ಇತ್ತು. ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಖ್ಯವೇ ಆಗಿದ್ದರೂ ಆರೋಗ್ಯದ ಹಿತದೃಷ್ಟಿಯಿಂದ ಸಾಕಷ್ಟು ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಪರೀಕ್ಷೆ ಬೇಡ ಎನ್ನುವ ವಾದವೂ ಕೇಳಿ ಬಂದಿತ್ತು. ಆದರೆ ಈ ಎಲ್ಲಾ ಚರ್ಚೆಗಳಿಗೆ ದಿಟ್ಟ ಉತ್ತರ ನೀಡುವಂತೆ ಶಿಕ್ಷಣ ಸಚಿವರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಹಾಗೂ ಸುರಕ್ಷಿತವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಮಾಡಿ ಮುಗಿಸಿರುವುದು ಅಭಿನಂದನೀಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
