ಬಂಟ್ವಾಳ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಮಂಗಳೂರು , ಕಥಾ ಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರು ಪ್ರದಾನ ಮಾಡಲಿರುವ ‘ಚೈತನ್ಯ ಶ್ರೀ’ ರಾಜ್ಯ ಪ್ರಶಸ್ತಿಗೆ ಸಾಹಿತಿ, ಸಂಘಟಕ , ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿರುತ್ತಾರೆ. ಇವರು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಅಧ್ಯಕ್ಷರಾಗಿ , ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾಗಿ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಘಟನೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಿರಿಯ ಪತ್ರಕರ್ತರಾಗಿರುವ ಇವರು ವಿವಿಧ ದಿನ ಪತ್ರಿಕೆಗಳಲ್ಲಿ ತಾಲೂಕು ವರದಿಗಾರರಾಗಿ ಸುದೀರ್ಘ ೩೩ ವರ್ಷಗಳ ಸೇವೆ ಸಲ್ಲಿಸಿರುತ್ತಾರೆ. 

ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿರುವ ಇವರು ಬಂಟ್ವಾಳ ತಾಲೂಕಿನ ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ,ರಾಜ್ಯ , ರಾಷ್ಟೀಯ ಮಟ್ಟದ ಹಲವು ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪುರಸ್ಕೃತರಾಗಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ಲೇಖನಗಳು ಕವನಗಳು ಪ್ರಕಟಗೊಂಡಿದ್ದು, ಭಾವಬಿಂದು ಕವನ ಸಂಕಲನ ನೇಪಾಳದ ಪೊಕರದಲ್ಲಿ ಬಿಡುಗಡೆಗೊಂಡಿದೆ.
ದಶಂಬರ ೨೭ ರಂದು ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ ಮಂಗಳೂರಿನಲ್ಲಿ ಏರ್ಪಡಿಸಿರುವ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಹಲವು ಗಣ್ಯರ ಉಪಸ್ಥಿತಿಯಲ್ಲಿ ಕ.ಸಾ.ಪ ಜಿಲ್ಲಾಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಪಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕಥಾಬಿಂದು ಪ್ರಕಾಶನದ ಅಧ್ಯಕ್ಷ ಪ್ರದೀಪ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದಾರೆ.
