ಶ್ರೀನಿವಾಸಪುರ: ಫಲಾನುಭವಿಗಳು ಕಂದಾಯ ಹಾಗೂ ಪಿಂಚಣಿ ಅದಾಲತ್ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.ತಾಲ್ಲೂಕಿನ ಯಲ್ದೂರು ಗ್ರಾಮದ ನ್ಯಾಷನಲ್ ಹೈಸ್ಕೂಲ್ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈತರು ಕಚೇರಿಗೆ ಅಲೆಯುವುದನ್ನು ತಪ್ಪಿಸುವ ಸಲುವಾಗಿ ಹೋಬಳಿ ಮಟ್ಟದಲ್ಲಿ ಅದಾಲತ್ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಒಂದೂವರೆ ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.

ಪ್ರತಿ ತಿಂಗಳು ೩ನೇ ಶನಿವಾರ ಗ್ರಾಮಗಳಲ್ಲಿ ಸ್ವಚ್ಛತಾ ದಿನವನ್ನಾಗಿ ಆಚರಿಸಬೇಕು. ಆ ದಿನ ಗ್ರಾಮ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕು. ಸ್ವಚ್ಛ ಪರಿಸರ ಇಲ್ಲದಿದ್ದಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ ಮಾತನಾಡಿ, ಅದಾಲತ್‌ನಲ್ಲಿ ಪಡೆದುಕೊಳ್ಳುವ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ೨೦೦ ಅರ್ಜಿಗಳನ್ನು ಸ್ವೀಕರಿಸಲಾಯಿತು.ಉಪ ತಹಶೀಲ್ದಾರ್ ಚಂದ್ರಪ್ಪ, ಶಿರಸ್ತೇದಾರ್ ಬಿ.ಆರ್.ಮುನಿವೆಂಕಟಪ್ಪ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಕಂದಾಯ ನಿರೀಕ್ಷಕರಾದ ಗುರುರಾಜರಾವ್, ವಿನೋದ್, ಜನಾರ್ಧನ್, ಗ್ರಾಮ ಲೆಕ್ಕಾಧಿಕಾರಿ ಆನಂದ್ ಇದ್ದರು.
