ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಮೇ16ರಂದು ಸೋಮವಾರ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಮತ್ತು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯರು ಆರತಿ ಬೆಳಗಿ ಸ್ವಾಗತಿಸಿದರು. ಕಾಲೇಜಿನ ಸಂಸ್ಥಾಪಕ ಡಾ.ಕೆ.ಪ್ರಭಾಕರ ಭಟ್ ಮತ್ತಿತರರು ಇದ್ದಾರೆ.
ಮಕ್ಕಳಿಗೆ ಬಾಲ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಹಿತ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ಆತ್ಮಸ್ಥೈರ್ಯ ವೃದ್ಧಿ ಜೊತೆಗೆ ದೇಶೀಯ ಸಂಸ್ಕೃತಿ ಮತ್ತು ರಾಷ್ಟ್ರಭಕ್ತಿ ಉದ್ದೀಪನಗೊಳಿಸುವ ಕಾರ್ಯ ನಡೆಯಬೇಕು ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆ ಸಂಸ್ಥಾಪಕ ಡಾ.ಕೆ.ಪ್ರಭಾಕರ ಭಟ್ ಹೇಳಿದ್ದಾರೆ.
ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸೋಮವಾರ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಮತ್ತು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಸಮಾರೋಪ ಭಾಷಣ ಮಾಡಿದರು. ವಿದ್ಯಾರ್ಥಿಗಳಲ್ಲಿ ಪಠ್ಯದ ಜೊತೆಗೆ ಸ್ವಾವಲಂಬನೆ ಮೂಡಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಎನ್ ಎಸ್ ಎಸ್ ಘಟಕ ಸಹಕಾರಿಯಾಗಿದೆ ಎಂದರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯ ಸಂತೋಷ್ ಕುಮಾರ್ ಬೆಟ್ಟು, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ವಿವೇಕಾನಂದ ಪ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಚಂದ್ರಶೇಖರ ಗೌಡ ಕಾರಂಬಡೆ, ಭಜನಾ ಮಂಡಳಿ ಅಧ್ಯಕ್ಷ ರಾಜೇಶ ಸಪಲ್ಯ, ಶಿವನಗರ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಗೌಡ ಮತ್ತಿತರರು ಇದ್ದರು.
ಇದೇ ವೇಳೆ ಶಾಲಾ ಪ್ರಾರಂಭೋತ್ಸವ, ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ನಡೆಯಿತು. ಶಿಬಿರಾರ್ಥಿ ಚೇತನ್, ಭಾಗ್ಯಶ್ರೀ, ಕೀರ್ತಿ ಅನಿಸಿಕೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕ ಜಯರಾಮ ಪಡ್ರೆ ಪ್ರಾಸ್ತಾವಿಕ ಮಾತನಾಡಿದರು. ಶಿಬಿರಾಧಿಕಾರಿ ಯತಿರಾಜ್ ಪೆರಾಜೆ ವಂದಿಸಿದರು. ಶಿಬಿರಾರ್ಥಿ ನವಿತ ಕಾರ್ಯಕ್ರಮ ನಿರೂಪಿಸಿದರು.
