ಬಂಟ್ವಾಳ: ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲ ಚಿಂತನೆ ಹಾಗೂ ಸಂಶೋಧನಾ ಪ್ರವೃತ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮೇಳವನ್ನು ಆಯೋಜಿಸಿತು.

ಶಾಲಾ ವಿಜ್ಞಾನ ಶಿಕ್ಷಕಿಯರಾದ ಸುಜಾತಾ ಹಾಗೂ ಶ್ರೀಲತಾ ಅವರ ಮಾರ್ಗ ದರ್ಶನದಲ್ಲಿ ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳನ್ನು ಸ್ವತಃ ವಿದ್ಯಾರ್ಥಿಗಳೇ ತಯಾರಿಸಿ, ಪ್ರದರ್ಶಿಸಿದರು.
ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಇದರ ಸ್ವಯಂ ಸೇವಕರಾದ ಶ್ರೀವತ್ಸ ಹಾಗೂ ಕುಮಾರಿ ಮೇಘ ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು.
ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳ ಜೊತೆಗೆ ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.ಪ್ರಥಮ ಬಹುಮಾನವನ್ನು 10ನೇ ತರಗತಿ ವಿದ್ಯಾರ್ಥಿ ತನ್ವಿತ್ ಹಾಗೂ ಮಹಮ್ಮದ್ ಸವಾದ್ ಅವರು ಹಂಚಿಕೊಂಡರು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭ ಮಾತನಾಡಿದ ಸಂಸ್ಥೆಯ ಸ್ವಯಂಸೇವಕ ಶ್ರೀವತ್ಸ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇಂತಹ ವಿಜ್ಞಾನ ಮೇಳಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ಶಿವಪ್ಪ ನಾಯ್ಕ ಎಸ್, ಹಿರಿಯ ಶಿಕ್ಷಕಿ ಶ್ರೀಮತಿ ವೀಣಾ ಭಾಗವಹಿಸಿದ್ದರು. ಕನ್ನಡ ಶಿಕ್ಷಕ ಧನರಾಜ್ ಡಿ ಆರ್ ವಂದಿಸಿದರು
