ಬಂಟ್ವಾಳ: ವಕೀಲರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಜಾರಿಯಲ್ಲಿರುವ ವಕೀಲರ ರಕ್ಷಣಾ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಬಂಟ್ವಾಳ ವಕೀಲರ ಸಂಘ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.

ಇದಕ್ಕು ಮೊದಲು ವಕೀಲರ ಸಂಘದ ನೇತೃತ್ವದಲ್ಲಿ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು. ಬಳಿಕ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಬಂಟ್ವಾಳ ತಹಶೀಲ್ದಾರ್ ಕಚೇರಿಗೆ ತೆರಳಿ ಸರಕಾರಕ್ಕೆ
ತಮ್ಮ ಬೇಡಿಕೆಯ ಮನವಿಯನ್ನುಉಪತಹಶೀಲ್ದಾರ್ ನವೀನ್ ಬೆಂಜನಪದವು ಅವರ ಮೂಲಕ ಸಲ್ಲಿಸಿದರು.
ವಕೀಲರ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಮತ್ತು ವಕೀಲರ ಸಂಘಗಳ ನಡುವೆ ಪರಿಣಾಮಕಾರಿ ಸಮನ್ವಯ ವ್ಯವಸ್ಥೆ ರೂಪಿಸಬೇಕು. ವಕೀಲರ ಮೇಲೆ ನಡೆಯುವ ದೌರ್ಜನ್ಯ ಹಾಗೂ ಬೆದರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ರಕ್ಷಣೆ ಒದಗಿಸುವ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈಗಾಗಲೇ ಜಾರಿಯಲ್ಲಿರುವ ಕಾಯ್ದೆಯನ್ನು ತಕ್ಷಣವೇ ಹಾಗೂ ರಕ್ಷಣೆ ಒದಗಿಸುವ ಬಲಿಷ್ಠ ಕಾನೂನಾಗಿ ರೂಪುಗೊಳಿಸುವ ನಿಟ್ಟಿನಲ್ಲಿ ಅಗತ್ಯ ತಿದ್ದುಪಡಿಗಳನ್ನು ತಂದು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿಯೇ ಮಂಡಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಗಿದೆ.
ಬಂಟ್ವಾಳ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ., ಉಪಾಧ್ಯಕ್ಷ ದಯಾನಂದ ರೈ ಪಿ., ಕಾರ್ಯದರ್ಶಿ ಕೆ. ನರೇಂದ್ರನಾಥ ಭಂಡಾರಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
