‘ಸಂವಿಧಾನದಿಂದ ಸಮಾನತೆ ಸಾಧ್ಯ’
ಬಂಟ್ವಾಳ: ಕಳೆದ 67 ವರ್ಷಗಳ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಯೊಂದಿಗೆ ರಚನೆಗೊಂಡ ಸಂವಿಧಾನದಿಂದ ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲರೂ ಸಮಾನತೆಯಿಂದ ಬೆಳೆದು ಬಲಿಷ್ಟ ರಾಷ್ಟ್ರ ನಿರ್ಮಿಸಲು ಸಾಧ್ಯವಾಗಿದೆ ಎಂದು ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶೀನಪ್ಪ ಎನ್. ಹೇಳಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಕಚೇರಿ ಎದುರು ಮಂಗಳವಾರ ನಡೆದ 67ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಬೂಡ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ್ವಾಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ ಸಹಿತ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ವೇಳೆ ಬಂಟ್ವಾಳ ಗ್ರಾಮಾಂತರ ಮತ್ತು ನಗರ ಠಾಣೆ ಹಾಗೂ ಸಂಚಾರಿ ಪೊಲೀಸರು ಸಹಿತ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪರೇಡ್ ನಡೆಯಿತು.
ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.
