ಬಂಟ್ವಾಳ: ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ತೋರಿಸಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದರು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಇದೇ ಮೊದಲಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಯಡಿಯೂರಪ್ಪ ಅವರು, ಶನಿವಾರ ಕಲ್ಲಡ್ಕ ಶ್ರೀರಾಮ ಮಂದಿರದ ಲೋಕಾರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕಲ್ಲಡ್ಕಕ್ಕೆ ಅಗಮಿಸುವ ದಾರಿ ಮಧ್ಯೆ ಬಿ.ಸಿ.ರೋಡಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇರಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 10ರಿಂದ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಭಾಷಣದುದ್ದಕ್ಕೂ ಕರ್ನಾಟಕ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಎಸ್ವೈ ಅವರು, ಕರ್ನಾಟಕದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಶಕ್ತಿಯುತಗೊಳಿಸುವ ಬದಲು ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ನಿಗ್ರಹ ದಳವನ್ನು ರಚಿಸಿ ಭ್ರಷ್ಟರನ್ನು ರಕ್ಷಿಸಲು ಮುಂದಾಗಿದೆ. ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದ್ದರು ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸದನದಲ್ಲಿ ಮಂಡಿಸಲು ಮೀನಾಮೇಷ ನಡೆಸುತ್ತಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಬರ ತಾಂಡವಾಡುತ್ತಿದೆ. ಎಲ್ಲೆಡೆ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಬರ ಪರಿಹಾರವಾಗಿ ಕೇಂದ್ರ ಸರಕಾರ ಈಗಾಗಲೇ 1400 ಕೋಟಿ ರೂ. ಬಿಡುಗಡೆ ಮಾಡಿದರೂ ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಅವರು ಟೀಕಾ ಪ್ರಹಾರಗೈದರುಕಾಂಗ್ರೆಸ್ ಮುಕ್ತ ಕರ್ನಾಟಕ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲುವುದರೊಂದಿಗೆ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಶ್ರಮಿಸಬೇಕೆಂದ ಅವರು, ಕೇಂದ್ರ ಸರಕಾರದ ಸಾಧನೆಯನ್ನು ಮನೆ ಮನೆ ತಲುಪಿಸುವ ಕಾರ್ಯದಲ್ಲಿ ತೊಡಗಿಸುವುದರೊಂದಿಗೆ ಪಕ್ಷವನ್ನು ಬಲ ಪಡಿಸುವಂತೆ ಕರೆ ನೀಡಿದ್ದರು.ತಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ವಿಷೇಶ ಅನುದಾನ ಮಂಜೂರು, ಪಾಲಿಟೆಕ್ನಿಕ್, ಪ್ರಥಮದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಅಗ್ನಿ ಶಾಮಕ ಠಾಣೆ, ಬಂಟ್ವಾಳ ಸಮುದಾಯ ಆರೋಗ್ಯ ಕೇಂದ್ರವನ್ನು ನೂರು ಬೆಡ್ಡಿನ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಿರುವುದು ಸಹಿತ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡಿರುವುದನ್ನು ಈ ಸಂದರ್ಭದಲ್ಲಿ ಬಿಎಸ್ವೈ ಅವರು ನೆನಪಿಸಿದರು.ಈ ಸಂದರ್ಭದಲ್ಲಿ ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಸಂಸ್ಥೆಯ ಕಾರ್ಮಿಕರು ಮತ್ತು ಹೊರ ಲೇಬಲ್ ಕೆಲಸಗಾರರು ಕೋಟ್ಪಾ ಕಾಯ್ದೆಯಿಂದ ಬೀಡಿ ಉದ್ದಿಮೆ ಅವಲಂಬಿತರಿಗೆ ಆಗುತ್ತಿರುವ ತೊಂದರೆ ಬಗ್ಗೆ ನೀಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ.ಎಸ್.ಯಡಿಯೂರಪ್ಪ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಇಲ್ಲಿನ ಸಂಸದರಾದ ನಳೀನ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆಯವರ ಜೊತೆ ಗೂಡಿ ಕೇಂದ್ರದ ಆರೋಗ್ಯ ಸಚಿವರೊಂದಿಗೆ ಬೀಡಿ ಕಾರ್ಮಿಕರು ಪ್ರಸ್ತುತ ಅನುಭವಿಸುತ್ತಿರುವ ಅನಿಶ್ಚಿತತೆಯನ್ನು ನಿವಾರಿಸಲು ಚರ್ಚಿಸುವುದಾಗಿ ಭರವಸೆ ನೀಡಿದರು.ಬಿ.ಎಸ್.ಯಡಿಯೂರಪ್ಪ ಅವರನ್ನು ಬಿ.ಸಿ.ರೋಡಿನ ಕೈಕಂಬ ದ್ವಾರದ ಬಳಿ ಅದ್ದೂರಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವಾಗತಿಸಿ ತೆರೆದ ಜೀಪಿನಲ್ಲಿ ಮೆರವಣಿಗೆಯಲ್ಲಿ ಬಿ.ಸಿ.ರೋಡ್ ಬಸ್ ನಿಲ್ದಾಣದವರೆಗೆ ಕರೆ ತರಲಾಯಿತು. ಸಾವಿರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಪ್ರತಾಪ್ಸಿಂಹ ನಾಯ್ಕ್, ಸಂಸದರಾದ ನಳೀನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಸುಲೋಚನ ಜಿ.ಕೆ. ಭಟ್, ಕ್ಷೇತ್ರ ಸಮಿತಿ ಅಧ್ಯಕ್ಷ ಜಿ.ಆನಂದ ಅವರು ಉಪಸ್ಥಿತರಿದ್ದರು.ಜಿಲ್ಲಾ ಉಪಾಧ್ಯಕ್ಷ ದೇವದಾಸ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಬಳಿಕ ಇಲ್ಲಿಂದ ವಾಹನ ಜಾಥದ ಮೂಲಕ ಕಲ್ಲಡ್ಕ ಶ್ರೀ ರಾಮ ಮಂದಿರಕ್ಕೆ ಬಿ.ಎಸ್.ವೈ ಅವರನ್ನು ಕಾರ್ಯಕರ್ತರು ಕರೆದೊಯ್ದರು.
ಚಿತ್ರ ಕಿಶೋರ್ ಪೆರಾಜೆ



