ಬಂಟ್ವಾಳ:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತಿಯಲ್ಲಿ ಇದೇ 21ರಂದು ಕೋಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಆವರಣದಲ್ಲಿ ಬಿಜೆಪಿ ವತಿಯಿಂದ ನಡೆಯಲಿರುವ ‘ತಿರಂಗ ಯಾತ್ರೆ’ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಸಾವಿರಕ್ಕೂ ಹೆಚ್ಚು ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸುವರು ಎಂದು ಕ್ಷೇತ್ರ ಸಮಿತಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಹೇಳಿದ್ದಾರೆ.
ಶುಕ್ರವಾರ ಸಂಜೆ ಬಿ.ಸಿ.ರೋಡಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಈ ಕಾರ್ಯಕ್ರಮವು ಬಿಜೆಪಿ ಪಕ್ಷದ ಚಿಹ್ನೆಯಡಿ ನಡೆಯದೆ, ಪಕ್ಷಾತೀತವಾಗಿ ಸಮಾಜದ ಎಲ್ಲಾ ವರ್ಗದ ದೇಶಪ್ರೇಮಿಗಳು ಭಾಗವಹಿಸಬಹುದು ಎಂದರು. ಪೋರ್ಚುಗೀಸರೊಂದಿಗೆ ಹೋರಾಡಿದ ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ ತ್ಯಾಗ ಮತ್ತು ಬಲಿದಾನ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ ಮಾತನಾಡಿ, ಜಿಲ್ಲೆಯಾದ್ಯಂತ ಒಟ್ಟು 10 ಸಾವಿರಕ್ಕೂ ಮಿಕ್ಕಿ ಮಂದಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ತಿಳಿಸಿದರು.
ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪಕ್ಷದ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಜಿ.ಆನಂದ, ಸುಲೋಚನಾ ಜಿ.ಕೆ.ಭಟ್, ರಾಮ್ದಾಸ್ ಬಂಟ್ವಾಳ, ಬಿ.ದಿನೇಶ್ ಭಂಡಾರಿ, ಮೋನಪ್ಪ ದೇವಸ್ಯ, ರಮಾನಾಥ ರಾಯಿ, ಹರಿಶ್ಚಂದ್ರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
