ವಿಟ್ಲ: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಎಸೈ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿಗಳ ತಂಡ ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಸಾಲೆತ್ತೂರು ಸಮೀಪ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.
ಮಂಗಳೂರು ಕಡೆಯಿಂದ ಮಂಚಿ ಮೂಲಕ ಕೇರಳಕ್ಕೆ ಬೆಳಗ್ಗಿನ ಜಾವ 4 ಗಂಟೆಗೆ ಸುಮಾರಿಗೆ ಎರಡು ಲಾರಿಗಳಲ್ಲಿ ಮರಳು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಾಲೆತ್ತೂರು ಸಮೀಪದ ಕೋಕಳ ಎಂಬಲ್ಲಿ ಪೊಲೀಸರ ತಂಡ ಪತ್ತೆ ಹಚ್ಚಿದ್ದಾರೆ. ಎರಡು ಲಾರಿಗಳ ಮೌಲ್ಯ 10.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

