ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಪ್ರಸ್ತುತ ನೀಡುತ್ತಿರುವ ಸ್ಕರ್ಟ್ ಬದಲಿಗೆ ಚೂಡಿದಾರ್ ಮಾದರಿಯಲ್ಲಿ ಸಮವಸ್ತ್ರ ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು. ಪ್ರತಿ ವರ್ಷ ಜೂನ್ ಅಂತ್ಯದ ವೇಳೆಗೆ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಸೈಕಲ್ ಮತ್ತು ಶೂ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಹಾಗೂ 8,9 ಮತ್ತು 10ನೇ ತರಗತಿ ವಿದ್ಯಾರ್ಥಿನಿಯರಿಗೆ ಚೂಡಿದಾರ್ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿಯವರು ಒಪ್ಪಿಗೆ ಸೂಚಿಸಿದ್ದಾರೆಂದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಚೂಡಿದಾರ್ ಸಮವಸ್ತ್ರ ಕಡ್ಡಾಯಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸಂಸದೀಯ ಕಾರ್ಯದರ್ಶಿ ಗೋವಿಂದರಾಜ್, ಮತ್ತಿರರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

