ಬಂಟ್ವಾಳ: ವಿದ್ಯಾರ್ಥಿಗಳು ಕ್ರೀಡಾಸ್ಪೂರ್ತಿಯಿಂದ ಮುನ್ನಡೆದಾಗ ಮಾತ್ರ ಬದುಕಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ ಬಾಳಿಗಾ ಹೇಳಿದ್ದಾರೆ. ತಾಲ್ಲೂಕಿನ ಬೆಂಜನಪದವು ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ಸರ್ಕಾರಿ ಪ್ರೌಢಶಾಲೆ ವತಿಯಿಂದ ಬುಧವಾರ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುಂಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ವಳವೂರು, ರೋಟರಿ ಕ್ಲಬ್‍ನ ಮಂಜುನಾಥ ಆಚಾರ್ಯ ಮತ್ತಿತರರು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಎ.ಟಿ.ಗಿರೀಶ್ಚಂದ್ರ ಸ್ವಾಗತಿಸಿ, ಉಪಪ್ರಾಂಶುಪಾಲೆ ಪಿ. ಶ್ರೀದೇವಿ ವಂದಿಸಿದರು. ಉಪನ್ಯಾಸಕರಾದ ಶ್ರೀಧರ ಅಡಿಗ ಕಾರ್ಯಕ್ರಮ ನಿರೂಪಿಸಿದರು.

