ಮೂಡುಬಿದಿರೆ: ರೋಟರಿ ಎಜ್ಯುಕೇಶನ್ ಸೊಸೈಟಿಯು 2014ರಲ್ಲಿ ಸ್ಥಾಪಿಸಿದ ರೋಟರಿ ಪಿಯು ಕಾಲೇಜಿಗೆ ಜ್ಯೋತಿನಗರ ಬಳಿಯಲ್ಲಿ 2.12 ಎಕ್ರೆ ಸ್ಥಳದಲ್ಲಿ ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಾಲೇಜು ಕಟ್ಟಡವು ಡಿ. 14ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ರೋಟರಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಕೆ ಅಮರನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ನೀಡಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮಾಜಿ ಸಚಿವ ಕಿಮ್ಮನೆ ರತ್ನಾಕರ, ಮಂಗಳೂರು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎಂ. ಬಿ ಪುರಾಣಿಕ್ ವಿಜ್ಞಾನ ಪ್ರಯೋಗಾಲಯಗಳನ್ನು ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ. ಆರ್. ತಿಮ್ಮಯ್ಯ, ಮೂಡುಬಿದಿರೆ ರೋಟರಿ ಕ್ಲಬ್ ಅಧ್ಯಕ್ಷ ಮಹಮ್ಮದ್ ಷರೀಫ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
1981-82ರಲ್ಲಿ 35 ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಸಂಸ್ಥೆಯಲ್ಲಿ ಪ್ರಸ್ತುತ ಪೂರ್ವ ಪ್ರಾಥಮಿಕ ಶಾಲೆಯಿಂದ ಪಿಯು ಕಾಲೇಜುವರೆಗೆ 2300ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪಡಯುತ್ತಿದ್ದಾರೆ. ಪಿಯು ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸುಗಳನ್ನು ಹೊಂದಿದ್ದು 2016-17ನೇ ಸಾಲಿನಲ್ಲಿ 110 ವಿದ್ಯಾರ್ಥಿಗಳಿದ್ದಾರೆ. ಎಸ್ಎಸ್ಎಲ್ಸಿಯಲ್ಲಿ ಶೇ. 95ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ, ಸಾಂಸ್ಕೃತಿಕ ಮತ್ತು ಕ್ರೀಡಾ ವಿಭಾಗದಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಿದ್ದು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು ಎಂದರು.
ಸಂಸ್ಥೆಯ ಕಾರ್ಯದರ್ಶಿ ನಾರಾಯಣ ಪಿ. ಎಂ., ರೋಟರಿ ಶಾಲೆಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಅದ್ಯಕ್ಷ ಮಹಮ್ಮದ್ ಷರೀಫ್ ಸದಸ್ಯರಾದ ಮೇಘನಾಥ, ಅಬ್ದುಲ್ ರವೂಫ್ ಉಪಸ್ಥಿತರಿದ್ದರು.

