ಬಂಟ್ವಾಳ:ಧಾರ್ಮಿಕ ಪುಣ್ಯಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವಲ್ಲಿ ಕ್ರಿಯಾಶೀಲ ನಾಯಕತ್ವ ಇರಬೇಕು. ಇಲ್ಲಿನ ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಪುನರ್ ನವೀಕರಣಗೊಳ್ಳಲು ಕೈಯ್ಯೂರು ನಾರಾಯಣ ಭಟ್ ಅವರಂತಹ ಹಿರಿಯ ಕ್ರಿಯಾಶೀಲ ವ್ಯಕ್ತಿಗಳು ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ತಾಲ್ಲೂಕಿನ ಮಂಚಿ-ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವರ ಗರ್ಭಗುಡಿಗೆ ಶಿಲಾನ್ಯಾಸ ಮತ್ತು ದೈವಗಳ ಪುನರ್ ಪ್ರತಿಷ್ಠೆ ಪ್ರಯುಕ್ತ ಸೋಮವಾರ ಏರ್ಪಡಿಸಿದ್ದ ಧಾರ್ಮಿ ಕ ಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇರಳ ರಾಜ್ಯದಲ್ಲಿ ಪಾರಂಪರಿಕ ವಾಸ್ತು ವ್ಯವಸ್ಥೆ ಇಂದಿಗೂ ಮುಂದುವರಿದಿದ್ದು, ಅವಿಭಜಿತ ಜಿಲ್ಲೆಯಲ್ಲಿ ಮಾತ್ರ ಸಾಮಾಜಿಕ ಪರಿವರ್ತನೆಯಿಂದಾಗಿ ದೇವಸ್ಥಾನ ಮತ್ತು ದೈವಸ್ಥಾನಗಳು ನಿರಂತರವಾಗಿ ಜೀರ್ಣೋದ್ಧಾರಗೊಳ್ಳುತ್ತಿದೆ ಎಂದರು. ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ, ದೇವಳದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಸೀತಾರಾಮ ಶೆಟ್ಟಿ, ಪ್ರಮುಖರಾದ ಚಿದಾನಂದ ರಾವ್, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಎಸ್. ಮಾವೆ ಮತ್ತಿತರರು ಶುಭ ಹಾರೈಸಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ರಾಮಕೃಷ್ಣ ನಾಯಕ್ ವಂದಿಸಿದರು. ವಿಜಯ ಶೆಟ್ಟಿ ಸಾಲೆತ್ತೂರು ಮತ್ತು ಮಮತಾ ಕಾರ್ಯಕ್ರಮ ನಿರೂಪಿಸಿದರು.
ಆರಂಭದಲ್ಲಿ ನಡೆದ ದೈವಗಳ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ನೀಡಿದರು.
