ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಹಂತ ಹಂತವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆಯಲ್ಲಿ ಘೋಷಿಸಿದ್ದಾರೆ.
ಹಣಕಾಸು ಸಚಿವ ಹಾಗೂ ಸಿಎಂ ಆಗಿಗಿರುವ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿಂದು 2018-19ನೇ ಸಾಲಿನ ಬಜೆಟ್ ಮಂಡಿಸಿದರು.
ಸರ್ಕಾರಿ ಶಾಲೆಗಳ ಬಲವರ್ಧನೆಗೆ ನಮ್ಮ ಸರ್ಕಾರ ಬದ್ದವಾಗಿದ್ದು, ಶಾಲಾ ಮಕ್ಕಳ ಸುರಕ್ಷತೆಯೇ ನಮ್ಮ ಸರ್ಕಾರದ ಪ್ರಥಮ ಕರ್ತವ್ಯ ಎಂದವರು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುವ ಪ್ರತೀ ತಾಲೂಕಿನ ಒಂದು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ಅತ್ಯುತ್ತಮ ಎಸ್ಡಿಎಂಸಿ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದರು.
ರಾಜ್ಯದಲ್ಲಿ ನೂರು ವರ್ಷಗಳನ್ನು ಪೂರೈಸಿದ 100 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪಾರಂಪರಿಕ ಶಾಲೆಗಳೆಂದು ಗುರುತಿಸಿ ಅವುಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಗೊಳಿಸಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿಜ್ಞಾನ ಸಮಿತಿ ರಚನೆ, ಅಗಸ್ತ್ಯ ಫೌಂಡೇಷನ್ ಸಹಭಾಗಿತ್ವದೊಂದಿಗೆ ಎಲ್ಲ ಜಿಲ್ಲೆಗಳಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ವಿಜ್ಞಾನ ಪ್ರಯೋಗಾಲಯ ಸೇರಿದಂತೆ ಪ್ರಸಕ್ತ ವರ್ಷ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಬಜೆಟ್ನಲ್ಲಿ 22, 350 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಹಾಗೂ ವಿಶ್ವ ಭಾತೃತ್ವ, ಸೇವಾ ಮನೋಭಾವ, ಶಾಂತಿ-ಶಿಸ್ತು, ಸಂಯಮ ಬೆಳೆಸಲು ಭಾರತ್ ಮತ್ತು ಸ್ಕೌಟ್ ಮತ್ತು ಗೈಡ್ಸ್ ಘಟಕಗಳನ್ನು ಎಲ್ಲೆಡೆ ಪ್ರಾರಂಭ ಮಾಡಲು ಸರ್ಕಾರ ಮುಂದಾಗಿದೆ ಎಂದು ವಿವರಿಸಿದರು.

