ಮಂಗಳೂರು: ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಷಾ ಕರಾವಳಿ ಪ್ರವಾಸದಲ್ಲಿ ಮೊದಲ ದಿನ ಮಂಗಳೂರಿನಲ್ಲಿ ಇರಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಮಿತ್ ಷಾ ಅವರು ಫೆ.19ರಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು, ಈ ವೇಳೆ ಅವರಿಗೆ ಸ್ವಾಗತ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಲ್ಲಿಂದ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಲಿದ್ದು ಬೆಳಿಗ್ಗೆ ಕುಕ್ಕೆ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸ್ವಾಮೀಜಿಗಳ ಜತೆ ಮಾತುಕತೆ ನಡೆಸಲಿದ್ದಾರೆ. ನಂತರ ಸುಬ್ರಹ್ಮಣ್ಯ ಬಳಿಯ ಕುಲ್ಕುಂದಲ್ಲಿ ನವಶಕ್ತಿ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಅಲ್ಲಿಂದ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜತೆ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಧ್ಯಾಹ್ನ 12.30ಗೆ ಬಂಟ್ವಾಳ ದಲ್ಲಿ ನವಶಕ್ತಿ ಸಮಾವೇಶದಲ್ಲಿ ಭಾಗಿಯಾಗಲಿರುವ ಅವರು 3 ಗಂಟೆ ಗೆ ಸುರತ್ಕಲ್ ನಲ್ಲಿ ಇತ್ತೀಚೆಗೆ ಹತ್ಯೆಯಾದ ದೀಪಕ್ ರಾವ್ ಮನೆಗೆ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಲಿರುವರು. ನಂತರ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ವೇದವ್ಯಾಸ ಕಾಮತ್, ಹರಿಕೃಷ್ಣ ಬಂಟ್ವಾಳ್, ಮೋನಪ್ಪ ಭಂಢಾರಿ ಮೊದಲಾದವರು ಉಪಸ್ಥಿತರಿದ್ದರು.

