ಬಂಟ್ವಾಳ: ಈ ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸಿದರೆ ರಾಜಧರ್ಮ ಪಾಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಭರವಸೆ ನೀಡಿದ್ದಾರೆ.
ಶುಕ್ರವಾರ ಇಲ್ಲಿನ ಸ್ಪರ್ಶ ಕಲಾಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕರ್ತ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ. ಅಲ್ಲದೆ, ದ.ಕ.ಜಿಲ್ಲೆಯಲ್ಲೂ ಬಿಜಿಪಿ ಅಭ್ಯರ್ಥಿಗಳು ಸ್ಪಷ್ಟ ಬಹು ಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದರೆ ಪಕ್ಷದ ಕಾರ್ಯಕರ್ತರಿಗೆ ಆದ ಅನ್ಯಾಯವನ್ನು ಸರಿಪಡಿಸುತ್ತೇನೆ ಎಂದರು.
ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೆಶ್ ಕಾರ್ಣಿಕ್, ಮುಖಂಡ ಹರಿಕೃಷ್ಣ ಬಂಟ್ವಾಳ್, ಕೋಟ ಶ್ರೀನಿವಾಸ ಪೂಜಾರಿ, ಮೋನಪ್ಪ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

