ಬಂಟ್ವಾಳ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಶ್ರೀಪಂಚದುರ್ಗಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಭಜನೆ ಹಾಗೂ ಸೂರ್ಯ ನಮಸ್ಕಾರವನ್ನು ಒತ್ತಾಯ ಪೂರ್ವಕವಾಗಿ ಮಾಡಿಸುತ್ತಿದ್ದು, ಇದಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿದ್ಯಾಕೇಂದ್ರದಲ್ಲಿ ಎಲ್ಲ ಧರ್ಮದ ವಿದ್ಯಾರ್ಥಿಗಳು ಕಲಿಯುತ್ತಿರುವಾಗ ಶಾಲೆಯಲ್ಲಿ ಧರ್ಮದ ಆಚರಣೆಗೆ ಅವಕಾಶ ಕಲ್ಪಿಸುವುದು ಸರಿಯಲ್ಲ. ಅಲ್ಲದೆ, ಇತರ ಸಮುದಾಯ ವಿದ್ಯಾರ್ಥಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಭಜನೆ ಹಾಗೂ ಸೂರ್ಯ ನಮಸ್ಕಾರ ಕಡ್ಡಾಯಗೊಳಿಸಿರುವುದು ಖಂಡನೀಯ ಎಂದು ಪೋಷಕರು ಹೇಳಿದ್ದಾರೆ.
ಶಾಲಾ ಸಮಯದಲ್ಲಿ ಶಿಕ್ಷಣವನ್ನು ಬೋಧಿಸದೇ, ಪ್ರತೀ ಗುರುವಾರ ಭಜನೆ ಹಾಗೂ ವಾರಕ್ಕೆ ಎರಡು ಸಲ ಸೂರ್ಯ ನಮಸ್ಕಾರವನ್ನು ಇತರ ಸಮುದಾಯಗಳ ವಿಧ್ಯಾರ್ಥಿಗಳಿಗೆ ಬಲವಂತವಾಗಿ ಹೇರಲಾಗುತ್ತಿದೆ. ಈ ಶಾಲೆಯಲ್ಲಿ ಮುಸ್ಲಿಂ ಹಾಗೂ ಇತರ ಧರ್ಮದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿದರೂ ಬಲವಂತ ಪಡಿಸುವುದು ಖಂಡನೀಯ. ಈ ನಿಟ್ಟಿನಲ್ಲಿ ಇಲ್ಲಿನ ಕೆಲ ವಿದ್ಯಾರ್ಥಿಗಳು ಈ ಕಾರ್ಯಕ್ರಮದಿಂದ ಬೇಸತ್ತಿದ್ದು, ಶಿಕ್ಷಣವನ್ನು ಮೊಟಕುಗೊಳಿಸಿ ಬೇರೆ ಶಾಲೆಗಳಿಗೆ ಹೋಗುವಂತಹ ಪರಿಸ್ಥಿತಿ ಉಂಟಾಗಬಹುದು ಎಂಬುದು ಪೋಷಕರು ಎಚ್ಚರಿಸಿದ್ದಾರೆ.
ಕ್ರಮಕ್ಕೆ ಆಗ್ರಹ: ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಶ್ರೀಪಂಚದುರ್ಗಾ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಭಜನೆ ಹಾಗೂ ಸೂರ್ಯ ನಮಸ್ಕಾರ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಶಾಲೆಯಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ನೀಡದಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಘಟಕದ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಿಎಫ್ಐ ಅಧ್ಯಕ್ಷ ವಝೀರ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಿಎಫ್ಐಯ ಸಫ್ವಾನ್, ಖಾದರ್ ಹಾಜರಿದ್ದರು.

