ಬಂಟ್ವಾಳ: ತಾಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಯಿ ಮತ್ತು ಕೆರೆಬಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ ಜು.27ರಂದು ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ರಾಷ್ಟ್ರಭಕ್ತಿ ಮೈಗೂಡಿಸುವ ಶಿಕ್ಷಣವೂ ಸಿಗಬೇಕು. ಆ ಮೂಲಕ ಸಮೃದ್ಧ ಮತ್ತು ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಎಂ.ತುಂಗಪ್ಪ ಬಂಗೇರ ಹೇಳಿದ್ದಾರೆ. ಬಂಟ್ವಾಳ ತಾಲೂಕಿನ ಜಿಲ್ಲಾ ಮಟ್ಟದ ಮಕ್ಕಳ ಮೇಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ ಅಧ್ಯಕ್ಷತೆ ವಹಿಸಿದ್ದರು. ಕೊಯಿಲ ಶಾಲಾ ಮುಖ್ಯಶಿಕ್ಷಕ ವೇದಾನಂದ ಕಾರಂತ ಪ್ರಾಸ್ತಾವಿಕ ಮಾತನಾಡಿ, ಪ್ರತಿಭಾ ಕಾರಂಜಿ ಸ್ಪರ್ಧೆ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಜೊತೆಗೆ ಆತ್ಮಸ್ಥೈರ್ಯ ಹೆಚ್ಚಳವಾಗುತ್ತದೆ ಎಂದರು.
ರಾಯಿ ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ, ರಾಷ್ಟ್ರಪ್ರಶಸ್ತಿ ಪುರಸ್ಕøತ ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಸದಸ್ಯರಾದ ರಾಘವ ಅಮೀನ್, ಪದ್ಮನಾಭ ಗೌಡ, ಶಿಕ್ಷಣ ಸಂಯೋಜಕಿ ಸುಜಾತ, ಮುಖ್ಯಶಿಕ್ಷಕ ಜಯರಾಮ ಪಡ್ರೆ, ಸಂಪನ್ಮೂಲ ವ್ಯಕ್ತಿ ಸುಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. 25ಕ್ಕೂ ಹೆಚ್ಚಿನ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ರಾಯಿ ಕ್ಲಸ್ಟರ್ ಸಿಆರ್‍ಪಿ ಚಿನ್ನಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಶ್ರೀಪತಿ ಭಟ್ ಕಾರ್ಯಕ್ರಮ ನಿರೂಪಿಸಿ, ಕೆರೆಬಳಿ ಕ್ಲಸ್ಟರ್ ಸಿಆರ್‍ಪಿ ಆದರ್ಶ ವಂದಿಸಿದರು.
