ಕೋಲಾರ : ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ.ಜಿ ಪಾಲಿ ಅವರು ತಿಳಿಸಿದರು.  ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಲೂರು ತಾಲ್ಲೂಕಿನ ಲಕ್ಕೂರಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಗ್ರಾಮಮಟ್ಟದ ಅರಿವು ಕಾರ್ಯಕ್ರಮ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
IMG_20191227_143950
ಎಲ್ಲಾ ಗ್ರಾಮಗಳಲ್ಲೂ ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಕೇಂದ್ರಗಳಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಹಲವು ಸೌಲಭ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ. ಶಾಲಾ ಪೂರ್ವ ಶಿಕ್ಷಣ, ಪೌಷ್ಠಿಕ ಆಹಾರ ಪೂರೈಕೆ, ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ 3 ರಿಂದ 6 ವರ್ಷದ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ ಸೇರಿಸಬೇಕು ಎಂದರು.  ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬದ ಗರ್ಭಿಣಿ ಬಾಣಂತಿಯರಿಗೆ ಮಾತೃಶ್ರೀ ಯೋಜನೆಯನ್ನು ಜಾರಿಗೆ ತಂದಿದ್ದು, 6 ತಿಂಗಳು ಪ್ರತಿ ತಿಂಗಳಿಗೆ 1000 ರೂಗಳಂತೆ 6000 ಸಾವಿರಗಳ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. ಹಾಗೆಯೆ ಕೇಂದ್ರ ಸರ್ಕಾರವು ಮಾತೃ ವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು, 5 ತಿಂಗಳು 5000 ರೂಗಳನ್ನು ಎಲ್ಲಾ ವರ್ಗದ ಗರ್ಭಿಣಿ ಬಾಣಂತಿಯರಿಗೆ ಪ್ರೋತ್ಸಾಹ ಧನ ನೀಡುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ವಿಜಯ್ ಕುಮಾರ್ ಅವರು ಮಾತನಾಡಿ, ಗ್ರಾಮ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಆಯೋಜಿಸಿರುವುದರಿಂದ ಸರ್ಕಾರದ ಯೋಜನೆಗಳ ಮಾಹಿತಿಯು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪುತ್ತದೆ. ಗ್ರಾಮ ಮಟ್ಟದಲ್ಲಿ ಎಎನ್‍ಎಂಗಳು ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯದ ಕಾಳಜಿ ಕುರಿತು ಜಾಗೃತಿಯನ್ನು ಮೂಡಿಸುತ್ತಿರುತ್ತಾರೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳು ಉಚಿತವಾಗಿ ದೊರೆಯುತ್ತವೆ. ಪ್ರತಿಯೊಬ್ಬರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ತಿಳಿಸಿದರು.  ಕೇಂದ್ರ ಮತ್ತು ರಾಜ್ಯ ಸರ್ಕಾರವು ಆರೋಗ್ಯ ಕರ್ನಾಟಕ ಮತ್ತು ಆಯುಷ್ಮಾನ್ ಭಾರತ ಆರೋಗ್ಯ ಸೇವೆಯನ್ನು ಜಾರಿಗೆ ತಂದಿದ್ದು,  ಇದರಡಿ ಆರೋಗ್ಯ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. 5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಸೇವೆಗಳ ಮಾಹಿತಿಗಾಗಿ ಆರೋಗ್ಯ ಸಹಾಯವಾಣಿ ಸಂಖ್ಯೆ; 18004254325 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
IMG_20191227_143943
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಮಾತನಾಡಿ, ಸರ್ಕಾರವು ವಿವಿಧ ಇಲಾಖೆಗಳ ಮೂಲಕ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಕುರಿತು ಅರಿವು ಮೂಡಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂಬುದು ಸರ್ಕಾರದ ಉದ್ದೇಶ. ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಸೌಲಭ್ಯಗಳನ್ನು ತಲುಪಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಲೇರಿಯಾ ಅಧಿಕಾರಿಗಳಾದ ಡಾ|| ಕಮಲ ಅವರು ಮಾತನಾಡಿ, ಸಾರ್ವಜನಿಕರು ಸ್ವಚ್ಛತೆಯನ್ನು ಕಾಪಾಡಬೇಕು. ತಮ್ಮ ಸುತ್ತ ಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನಿಂತ ನೀರಿನಲ್ಲಿ ಲಾರ್ವಾಗಳು ಉತ್ಪತ್ತಿಯಾಗಿ ಸೊಳ್ಳೆಗಳ ಸಂಖ್ಯೆ ಹೆಚ್ಚಾಗಿ ಡೆಂಗ್ಯೂ ಮತ್ತು ಚಿಕನ್‍ಗುನ್ಯಾ ಹರಡುತ್ತವೆ. ನೀರಿನ ತೊಟ್ಟಿಗಳು, ಡ್ರಂಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಲಾರ್ವಾಹಾರಿ ಮೀನುಗಳನ್ನು ಬಿಡುತ್ತಿದ್ದು, ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು. ಮೀನುಗಳು ಲಾರ್ವಾಗಳನ್ನು ತಿಂದು ನಾಶಪಡಿಸುತ್ತವೆ. ಸೊಳ್ಳೆಗಳಿಂದ ಕಚ್ಚಿಸಿಕೊಳ್ಳದಂತೆ ರಕ್ಷಣೆಯನ್ನು ಪಡೆದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.
IMG_20191227_143936
ಕಾರ್ಯಕ್ರಮದಲ್ಲಿ ಮಧುಮೇಹ ಮತ್ತು ರಕ್ತದೊತ್ತಡಗಳ ಪರೀಕ್ಷೆಯನ್ನು ಉಚಿತವಾಗಿ ಮಾಡಲಾಯಿತು. 43 ಮಂದಿ ಪರೀಕ್ಷೆಯನ್ನು ಮಾಡಿಸಿಕೊಂಡರು. ಇದೇ ಸಂದರ್ಭದಲ್ಲಿ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯ ಆರೋಗ್ಯ ಕಾರ್ಡ್ ಹಾಗೂ ಭಾಗ್ಯಲಕ್ಷ್ಮೀ ಬಾಂಡ್‍ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಾ ತಂಡದಿಂದ ಸರ್ಕಾರದ ವಿವಿಧ ಯೋಜನೆಗಳ ಕುರಿತು ಬೀದಿನಾಟಕ ಹಾಗೂ ಗಾಯನಗಳ ಮೂಲಕ ಅರಿವು ಮೂಡಿಸಲಾಯಿತು.  ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಬ್ಬಮ್ಮ, ಉಪಾಧ್ಯಕ್ಷರಾದ ವಿ.ರಾಜಪ್ಪ,  ಮಾಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ವಂಶಿಕೃಷ್ಣ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳಾದ ಅಶ್ವತಮ್ಮ, ಲಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ|| ಶೃತಿ, ಡಾ|| ಸವಿತಾ, ಕೀಟ ತಜ್ಞರಾದ ವೇಣುಗೋಪಾಲ್, ಪಿಡಿಒ ಲೋಕೇಶ್ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *