ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಮತ್ತು ಕುಂದಾಪುರ ರಕ್ತನಿಧಿ ಕೇಂದ್ರ ಸಹಯೋಗದೊಂದಿಗೆ ಶತಮಾನೋತ್ಸವದ ಅಂಗವಾಗಿ ಇಂದು ಅಜ್ಜರಕಾಡು ರೆಡ್ ಕ್ರಾಸ್ ಭವನದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರಕ್ಕೆ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಹೆಚ್ಚಿನ ಕಡೆಗಳಲ್ಲಿ ರಕ್ತದ ಕೊರತೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ರೆಡ್ ಕ್ರಾಸ್ ಸಂಸ್ಥೆ ಆಯೋಜಿಸಿರುವ ರಕ್ತದಾನ ಶಿಬಿರವು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಉಪಸಭಾಪತಿ ಅಶೋಕ್ ಕುಮಾರ್ ವೈ.ಜಿ, ಖಜಾಂಚಿ ಟಿ. ಚಂದ್ರಶೇಖರ್, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸನ್ಮತ್ ಹೆಗ್ಡೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ರಾಘವೇಂದ್ರ ಪ್ರಭು ಕರ್ವಾಲು ಅವರು 50 ನೇ ಬಾರಿ ರಕ್ತದಾನ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.


