ಬಂಟ್ವಾಳ: ಕಿಯೋನಿಕ್ಸ್ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಿ, ಮಂಗಳೂರಿನಲ್ಲಿ ದ.ಕ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೇಂದ್ರವನ್ನು ತೆರೆದು ಐಟಿ ಕಂಪೆನಿಗಳ ಸ್ಥಾಪನೆಯ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದರು. 
ಅವರು ಕಿಯೋನಿಕ್ಸ್ ಅಧ್ಯಕ್ಷರಾಗಿ ಬುಧವಾರ ಮೊದಲ ಬಾರಿಗೆ ಬಂಟ್ವಾಳಕ್ಕೆ ಆಗಮಿಸಿದ್ದು, ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಯಂತೆ ರಾಷ್ಟ್ರ ನಿರ್ಮಾಣಕ್ಕೆ ದುಡಿಯುವ ಸಂಸ್ಕೃತಿ ಬೆಳೆಯಬೇಕು, ಯುವಶಕ್ತಿಗೆ ಚೈತನ್ಯ ನೀಡುವ ಕೆಲಸ ಆಗಬೇಕಾಗಿದ್ದು, ಈ ದೆಸೆಯಲ್ಲಿ ಸಂಸ್ಥೆಯ ಮೂಲಕ ಮುಂದಡಿಡುವ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಮಾತನಾಡಿ, ಪಕ್ಷದ ಸಂಘಟನೆಗೆ ಹರಿಕೃಷ್ಣ ಬಂಟ್ವಾಳ ಸಾಕಷ್ಟು ಕೊಡುಗೆ ನೀಡಿದ್ದು, ಕಿಯೋನಿಕ್ಸ್ ಮೂಲಕ ಐಟಿ ಬಿಟಿ ಕ್ಷೇತ್ರದಲ್ಲಿ ಯುವಕರಿಗೆ ಉದ್ಯೋಗ ದೊರಕಿಸಿ ಕೊಡುವ ಕಾರ್ಯ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ. ಐಟಿ ಬಿಟಿ ಸಚಿವರಾದ ಡಿಸಿಎಂ ಡಾ| ಅಶ್ವಥ ನಾರಾಯಣ್ ಅವರು ಕೂಡ ಬೆಂಬಲ ನೀಡುವ ಭರವಸೆ ನೀಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಸತೀಶ್ ಕುಂಪಲ, ಜಯಶ್ರೀ ವೇದಿಕೆಯಲ್ಲಿದ್ದರು. ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರ ಪರವಾಗಿ ಹರಿಕೃಷ್ಣ ಬಂಟ್ವಾಳ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
