ಮೂಡುಬಿದಿರೆ: ಕೇಂದ್ರ ಸರ್ಕಾರದ `ಜಲ್‍ಜೀವನ್ ಮಿಷನ್’ ಯೋಜನೆಯಡಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರಕ್ಕೆ ದಿನದ 24 ಗಂಟೆ ನಿರಂತರ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ನಡೆಯುತ್ತಿದೆ. ಸುಮಾರು 140 ಕೋಟಿ ವೆಚ್ಚದ ಈ ಯೋಜನೆ ಬಗ್ಗೆ ಶುಕ್ರವಾರ ಬೆಂಗಳೂರಿನಲ್ಲಿ ಪಂಚಾಯತ್‍ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಅಧಿಕಾರಿಗಳ ಸಭೆಯಲ್ಲಿ ನಾನು ಕೂಡ ಭಾಗವಹಿಸಲಿದ್ದು ಯೋಜನೆಗೆ ಅನುಮೋದನೆ ಸಿಕ್ಕಿದ್ದಲ್ಲಿ ನಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಮೂಡುಮಾರ್ನಾಡಿನಲ್ಲಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಕಾಸನ್‍ಬೆಟ್ಟು ರಸ್ತೆ ಅಭಿವೃದ್ಧಿ ಮತ್ತು ಸುಮಾರು 50 ಲಕ್ಷ ವೆಚ್ಚದಲ್ಲಿ ಶಿರ್ತಾಡಿಯಿಂದ ಓಡದಕರಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ರಸ್ತೆಗಳ ವಿಸ್ತರಣೆಯಿಂದ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಪಿ ಸುಜಾತ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಾಗವೇಣಿ, ಪ್ರಶಾಂತ್ ಮತ್ಲ್‍ಮಾರ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀನಾಥ್ ಸುವರ್ಣ, ಲತಾ ಪಿ.ಹೆಗ್ಡೆ, ವಕೀಲ ಶಾಂತಿಪ್ರಸಾದ್ ಹೆಗ್ಡೆ, ಬಿಜೆಪಿ ಮುಕಂಡರಾದ ಸುಖೇಶ್ ಶೆಟ್ಟಿ, ದಿವ್ಯವರ್ಮ, ರಾಜೇಶ್ ಸುವರ್ಣ, ಪಿಡಬ್ಲ್ಯುಡಿ ಎಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.
