ಬಂಟ್ವಾಳ:ತಾಲ್ಲೂಕಿನ ಮದ್ವಪಲ್ಕೆ ನಿವಾಸಿ ಕಾವಳಪಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ (45) ಇವರು ಶನಿವಾರ ಸಂಜೆ ಸ್ವಗೃಹದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರಿಗೆ ಪತಿ ಸಹಿತ ಪುತ್ರ ಮತ್ತು ಪುತ್ರಿ ಇದ್ದಾರೆ.
ಶನಿವಾರ ಸಂಜೆ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ಕಂಡ ಪುತ್ರ ತಕ್ಷಣವೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಅಲ್ಲೇ ಮೃತಪಟ್ಟಿದ್ದಾರೆ.

ತೀವ್ರ ರಕ್ತದೊತ್ತಡ ಕಡಿಮೆಯಾಗಿ ಅವರು ಕುಸಿದು ಬಿದ್ದಿರಬೇಕು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ಇನ್ಸ್ಪೆಕ್ಟರ್ ಕೆ.ಯು. ಬೆಳ್ಳಿಯಪ್ಪ ಆಸ್ಪತ್ರೆಗೆ ಭೇಟಿ ನೀಡಿ, ತನಿಖೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಮೃತರು ಮದ್ವ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ಧೇಶಕಿಯಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದು, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮತ್ತು ಸಕ್ರಿಯ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದರು.
ಟ್ಯಾಂಕರ್ ಚಾಲಕರಾಗಿರುವ ಇವರ ಪತಿ ಮುಂಬೈನಲ್ಲಿದ್ದು, ಪತ್ನಿ ಸಾವಿನ ಸುದ್ದಿ ತಿಳಿದು ತಕ್ಷಣವೇ ವಾಪಾಸಾಗಿದ್ದಾರೆ.
ಇವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ವಿವಿಧ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಆಸ್ಪತ್ರೆಗೆ ತೆರಳಿ, ಪಕ್ಷದ ಒಬ್ಬ ಪ್ರಾಮಾಣಿಕ ಕಾರ್ಯಕರ್ತೆಯನ್ನು ಕಳೆದುಕೊಂಡಂತಾಗಿದೆ ಎಂದು ದುಃಖ ವ್ಯಕ್ತ ಪಡಿಸಿದ್ದಾರೆ.
ಸ್ಥಳೀಯ ತಾ.ಪಂ.ಸದಸ್ಯರಾದ ಬಿ.ಪದ್ಮಶೇಖರ ಜೈನ್, ವಿನಯ ನಾಯಕ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಬ್ಯಾಂಕ್ ಮೆನೇಜರ್ ಬೇಬಿ ಕುಂದರ್ ಮತ್ತಿತರರು ಮೃತರ ಮನೆಗೆ ತೆರಳಿ ಅಂತಿಮ ನಮನ ಸಲ್ಲಿಸಿದರು.
