ಬೆಂಗಳೂರು: ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಸ್ಪರ್ಧಾಕಾಂಕ್ಷಿಗಳು ಭರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹೋಬಳಿಗೊಂದು ಜಿಲ್ಲಾ ಪಂಚಾಯಿತಿ ಕ್ಷೇತ್ರ ಇದ್ದರೆ, ಈ ಹೋಬಳಿಯಲ್ಲೇ ಮೂರ್ನಾಲ್ಕು ತಾಪಂ ಕ್ಷೇತ್ರಗಳಿವೆ. ಹಾಗಾಗಿ ಗ್ರಾಮ ಪಂಚಾಯಿತಿಯಲ್ಲಿ ತಮ್ಮ ಬೆಂಬಲಿತರನ್ನೇ ಗೆಲ್ಲಿಸಲು ಹರಸಾಹಸ ಪಟ್ಟಿರುವ ಆಕಾಂಕ್ಷಿತರು ತಾಪಂ-ಜಿಪಂ ಚುನಾವಣೆ ಅಧಿಸೂಚನೆಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಈ ನಡುವೆ ತಾಲೂಕು ಪಂಚಾಯಿತಿಗಳನ್ನೇ ರದ್ದುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಸುದ್ದಿ ಆಕಾಂಕ್ಷಿಗಳಿಗೆ ಟೆನ್ಷನ್ ತರಿಸಿದೆ.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ತಾಲೂಕು ಪಂಚಾಯತಿಗಳನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
ಜೆಡಿಎಸ್ ಸದಸ್ಯ ವೆಂಕಟರಾವ್ ನಾಡಗೌಡ ಮಾತನಾಡಿ, ತಾಲೂಕು ಪಂಚಾಯಿತಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ತಾಪಂ ರದ್ದುಪಡಿಸುವ ಮೂಲಕ ಮೂರು ಹಂತಗಳ ಪಂಚಾಯಿತಿ ವ್ಯವಸ್ಥೆ ಬದಲು ಎರಡೇ ಹಂತಗಳ ಪಂಚಾಯಿತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದರು.
