ಶ್ರೀನಿವಾಸಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದ ಪರಿಣಾಮವಾಗಿ, ನೌಕರರ ಕುಟುಂಬದ ಸದಸ್ಯರು ಯುಗಾದಿ ಹಬ್ಬದಿಂದ ವಂಚಿತರಾಗಿದ್ದಾರೆ. ಇದು ಅತ್ಯಂತ ಅಮಾನವೀಯ ನಡವಳಿಕೆಯಾಗಿದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಚೌಡೇಶ್ವರಿ ದೇವಾಲಯದ ಸಮೀಪ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನೀಡಿದ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಸಾರಿಗೆ ಮುಷ್ಕರದಿಂದ ನೌಕರರು ಮಾತ್ರವಲ್ಲದೆ ಸಾರ್ವಜನಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೊಟ್ಟು ತೆಗೆದುಕೊಳ್ಳವ ಮನೋಭಾವ ಮುಖ್ಯವಾಗುತ್ತದೆ. ಸರ್ವಾಧಿಕಾರಿ ಧೋರಣೆ ಸಾಧುವಲ್ಲ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕರು ಸೇರಿದಂತೆ ಬಹುತೇಕ ಮುಖಂಡರು ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಸರ್ಕಾರ ನೌಕರರ ಸಮ್ಯೆಗಳ ಪರಿಹಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ, ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕಾಂಗ್ರೆಸ್ ಅಧ್ಯಕ್ಷ ಎಚ್ ಅಕ್ಬರ್ ಷರೀಫ್ ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಮಾಜಿ ಅಧ್ಯಕ್ಷ ಎಸ್.ವಿ.ಸುಧಾಕರ್ ಇದ್ದರು.

