ಬೆಂಗಳೂರು: ಆರ್ಕಿಡ್ಸ್ ಶಾಲೆಯಲ್ಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಕಹಿ ನೆನಪು ಮಾಸುವ ಮುನ್ನವೇ, ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು, ಬಾಲಕಿ ಮೇಲಿನ ಲೈಂಗಿಕ ದೌರ್ಜನ್ನವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಿವಿ ರಾಮನಗರ ಬಿಜೆಪಿ ಶಾಸಕ ಎಸ್.ರಘು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಶಾಲಾ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದ್ದಾರೆ. ಇಂದಿರಾನಗರದಲ್ಲಿರುವ ಕೇಂಬ್ರಿಡ್ಜ್ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.

ಈ ಸಂಬಂಧ ಬಾಲಕಿ ತಾಯಿ ಜೀವನ್ ಭೀಮಾನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಕಲಂ 376(ಅತ್ಯಾಚಾರ) ಹಾಗೂ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿ ನೀಡಿದ ಸುಳಿವಿನ ಮೇಲೆ ಶಾಲೆಯ ದೈಹಿಕ ಶಿಕ್ಷಕ ಜೈಶಂಕರ್(38) ನನ್ನು ಬಂಧಿಸಿದ್ದಾರೆ. ಅಲ್ಲದೆ ಇಂದು ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಲೋಕ್ ಕುಮಾರ್ ಪ್ರತಿಭಟನಾ ನಿರತ ಪೋಷಕರನ್ನು ಸಮಾಧಾನ ಪಡಿಸುವ ಯತ್ನಕ್ಕೆ ಮುಂದಾದರು. ಆದರೆ ಕುಪಿತಗೊಂಡ ಪೋಷಕರು ಪೊಲೀಸ್ ಆಯುಕ್ತರೊಂದಿಗೆ ವಾಗ್ವಾದಕ್ಕಿಳಿದ ಘಟನೆ ನಡೆಯಿತು.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬೆಂಗಳೂರು ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ಇಂದು ಶಾಲೆಗೆ ಭೇಟಿನೀಡಿ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ಹಿಂದೆ ಶಾಲೆಗೆ ಮಾರ್ಗ ಸೂಚಿ ಪಾಲನೆ ಮಾಡುವಂತೆ ಎಚ್ಚರಿಕೆ ನೀಡಿದರು ಶಾಲಾ ಆಡಳಿತ ಮಂಡಳಿ ಯಾವುದೇ ಕ್ರಮಗಳನ್ನು ತೆಗೆದುಕೊಂಡಲ್ಲ ಮತ್ತು ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಒಂದು ದುರದ್ರಷ್ಟಕರ ಎಂದಿದ್ದಾರೆ.

By Suddi9

Leave a Reply

Your email address will not be published. Required fields are marked *