ಹುಮ್ನಾಬಾದ್ ತಹಸೀಲ್ದಾರ್ಗೆ ಹಲ್ಲೆ ಪ್ರಕರಣ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರಿ ನೌಕರರ ಸಂಘದಿಂದ ಒತ್ತಾಯ
ಮೂಡುಬಿದಿರೆ: ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ತಹಸೀಲ್ದಾರ್ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮೂಡುಬಿದಿರೆ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಮೂಡುಬಿದಿರೆ ತಾಲೂಕು ಅಧ್ಯಕ್ಷ ನಾಗೇಶ್ ಎಸ್., ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಮೇಲೆ ಇಂತಹ ಘಟನೆಗಳಾಗುತ್ತಿದೆ. ರಾಜ್ಯ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕಾರ್ಯಾಂಗದ ಅಧಿಕಾರಿ, ನೌಕರರ ಮೇಲೆ ಆಗುತ್ತಿರುವ ದೌರ್ಜನ್ಯದಿಂದಾಗಿ ಆತಂಕ ಹಾಗೂ ಭಯದಿಂದ ಕರ್ತವ್ಯ ನಿರ್ವಹಿಸುವ ಸಂದರ್ಭ ಒದಗಿಬಂದಿದೆ. ಸರ್ಕಾರಿ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ನಿಯಂತ್ರಿಸಲು ರಾಜ್ಯದಲ್ಲಿ ಕಠಿಣ ಕ್ರಮಗಳು ಜಾರಿಯಾಗಬೇಕೆಂದು ಒತ್ತಾಯಿಸಿದರು.
ತಹಸೀಲ್ದಾರ್ ಪುಟ್ಟರಾಜು ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಉಪತಹಸೀಲ್ದಾರ್ ರಾಮ ಕೆ., ಸಂಘದ ಕೋಶಾಧಿಕಾರಿ ಬಸಪ್ಪ ನಾಶಿ ಹಲ್ಲೆಯನ್ನು ಖಂಡಿಸಿ ಮಾತನಾಡಿದರು. ಸಂಘದ ಉಪಾಧ್ಯಕ್ಷರಾದ ಅಬ್ದುಲ್ ರಝಾಕ್(ಅಬಕಾರಿ), ಜಯರಾಮ್ ಬಿ.ಎಸ್ (ಅರಣ್ಯ ಇಲಾಖೆ), ಸಂಘಟನಾ ಕಾರ್ಯದರ್ಶಿ ಸುಭಾಶ್ಚಂದ್ರ (ಪಶುಸಂಗೋಪನಾ ಇಲಾಖೆ), ಜೊತೆ ಕಾಯದರ್ಶಿ ಮೆಲ್ವಿನ್ ಅಲ್ಬುಕರ್ಕ್, ತಾಲೂಕು ಗ್ರಾಮ ಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುನೀಲ್ ಮಿರಾಂದ, ತಿಲಕ್, ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.