ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದು ಐವರು ದಾರುಣ ಸಾವು
ಮುಂಬೈ: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವೊಂದು ಕುಸಿದುಬಿದ್ದ (Building Collapses) ಪರಿಣಾಮ ಐವರು ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ (Maharashtra) ಅಮರಾವತಿಯಲ್ಲಿ (Amravati) ನಡೆದಿದೆ.
ಘಟನೆ ಅಮರಾವತಿಯ ಪ್ರಭಾತ್ ಟಾಕೀಸ್ ಚಿತ್ರಮಂದಿರದ ಬಳಿ ನಡೆದಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಕಟ್ಟಡ ಕುಸಿದ ಬಳಿಕ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಪವನೀತ್ ಕೌರ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಂತ್ರಸ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದ್ದು, ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಕೆಡವಲು ಅಮರಾವತಿ ಮುನ್ಸಿಪಲ್ ಕಾರ್ಪೊರೇಷನ್ (ಎಎಂಸಿ) ಜುಲೈನಲ್ಲಿಯೇ ನೋಟಿಸ್ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.