ಮಂಗಳೂರು: ಯಕ್ಷಗಾನದ ಅಪ್ರತಿಮ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (90) ವಿಧಿವಶರಾಗಿದ್ದಾರೆ.

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ರ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬ್ಳೆಯಲ್ಲಿ ಸುಂದರ್ ರಾವ್ ಜನಿಸಿದರು.

ಯಕ್ಷಗಾನ ಮತ್ತು ತಾಳ-ಮದ್ದಳೆ ಕಲಾವಿದರಾಗಿದ್ದ ಸುಂದರ್ ರಾವ್ ಮಂಗಳೂರಿನ ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. 1994 ರಿಂದ 1999ರ ವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. 

ಇವರು ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಇವರು ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆಯನ್ನೂ ಪಡೆದಿದ್ದಾರೆ.

ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧರಾಗಿದ್ದ ಕುಂಬ್ಳೆ ಸುಂದರ್ ರಾವ್ ಪ್ರಾಸಬದ್ಧ ಸಂಭಾಷಣೆಯಿಂದಲೇ ಹೆಸರುವಾಸಿಯಾಗಿದ್ದರು. ರಾವ್ 50ಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂಬ್ಳೆ ಸುಂದರ್ ರಾವ್ ಮಂಗಳೂರಿನ ಪಂಪ್‌ವೆಲ್‌ನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಸುಂದರ್ ರಾವ್ ನಿಧನಕ್ಕೆ ಯಕ್ಷಕಲಾರಂಗ ಸಂತಾಪ ವ್ಯಕ್ತಪಡಿಸಿದೆ,

ಡಿ.01ರಂದು ಗುರುವಾರ ಅಂತ್ಯ ಸಂಸ್ಕಾರ ನೆರವೇರಲಿದ್ದು, ಸಾರ್ವಜನಿಕರಿಗೆ ವೀಕ್ಷಣೆಗೆ ಮಂಗಳೂರು ಪಂಪ್ವೆಲ್ ಬಳಿ ಇರುವ ಅವರ ಮನೆಯಲ್ಲಿ ಅವಕಾಶವಿದೆ. 

By suddi9

Leave a Reply

Your email address will not be published. Required fields are marked *