224 ಕ್ಷೇತ್ರದಲ್ಲು ಕೆಜೆಪಿ ಸ್ಪರ್ಧೆ:ಮುಂದಿನವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಬಂಟ್ವಾಳ: ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ)224 ಕ್ಷೇತ್ರದಲ್ಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದು,ಮುಂದಿನ ವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್ ತಿಳಿಸಿದ್ದಾರೆ.
ಶನಿವಾರ ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲು ಕಾಯುತ್ತಿದ್ದು,ಕನಿಷ್ಠ 50 ಕ್ಷೇತ್ರಗಳಲ್ಲಿ ಗೆಲ್ಲುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಜನತೆ ಬೇಸತ್ತಿದ್ದು,ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಕೆಜೆಪಿ ಸಂಕಲ್ಪ ತೊಟ್ಟಿದೆ.ಕೆಲವೇ ದಿನದಲ್ಲಿ ಪಕ್ಷದಿಂದ ವಿಶೇಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದ ಅವರು ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕಾಂಗ್ರೆಸ್,ಬಿಜೆಪಿ,ಜೆಡಿಎಸ್ ನ ಹಲವಾರು ನಾಯಕರು ಕೆಜೆಪಿಯ ಸಂಪರ್ಕದಲ್ಲಿದ್ದಾರೆ ಎಂದು ಪದ್ಮನಾಭ ಪ್ರಸನ್ನ ಕುಮಾರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವಾದ ಕೆಜೆಪಿಯ ಬೆಂಬಲವಿಲ್ಲದೆ ಯಾವುದೇ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ,ಜೆಡಿಎಸ್ ಪೂರ್ಣಬಹುಮತ ಪಡೆದು ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಬಿ.ಸಿ.ರೋಡಿನಲ್ಲೇ ಬಂದು ತಾನು ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸವಾಲೆಸೆದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷ ದೊರೈರಾಜ್,ಸಂಚಾಲಕ ಪುಟ್ಟಸ್ವಾಮಿ ಉಪಸ್ಥಿತರಿದ್ದರು.