ಗಾಯಾಳುಗಳನ್ನು ಭೇಟಿಯಾಗಿ ಧೈರ್ಯ ತುಂಬಿದ ಮಾಜಿ ಸಂಸದ,ಶಾಸಕರು
ಬಂಟ್ವಾಳ : ಶ್ರೀ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆಗೊಳಗಾಗಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿ,ಘಟನೆಯ ಬಗ್ಗೆ ಮಾಹಿತಿಪಡೆದರು.
ಈ ಸಂದರ್ಭ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪಕ್ಷದ ಸ್ಥಳೀಯ ಪ್ರಮುಖರುಗಳು ಹಾಜರಿದ್ದು,ಗಾಯಾಳುಗಳಿಗೆ ಧೈರ್ಯ ತುಂಬಿದರು.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಈ ಘಟನೆ ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ,ಕೃತ್ಯದ ಬಳಿಕ ಪರಾರಿಯಾದ ಎಲ್ಲಾ ದುಷ್ಕರ್ಮಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.