ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ
ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟ ಎಲ್ಲಾ ಕಾಮಗಾರಿಗಳನ್ನು ಯೋಜನಾ ಬದ್ಧವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವಂತೆ ಲೋಕಸಭಾ ಸದಸ್ಯ ಬ್ರ್ರಿಜೇಶ್ ಚೌಟ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಸರ್ಕಾರದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖಾ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ, ಸಾಣೂರು -ಬಿಕರ್ನಕಟ್ಟೆ, ಪೂಂಜಾಲಕಟ್ಟೆ- ಚಾರ್ಮಾಡಿ ಸೇರಿದಂತೆ ವಿವಿಧ ಮಹತ್ವದ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ, ಈ ಯೋಜನೆಗಳು ಪೂರ್ಣಗೊಂಡರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ ಪ್ರಗತಿ ಆಗಲಿದೆ ಎಂದು ಅವರು ಹೇಳಿದರು.ಬಿ.ಸಿ.ರೋಡ್ – ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಂಸದರು ಕಾಮಗಾರಿಗಳನ್ನು ಅಲ್ಲಲ್ಲಿ ನಡೆಸುವ ಮೊದಲು ವ್ಯವಸ್ಥಿತವಾಗಿ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ನಡೆಸಬೇಕು, ಸಂಪೂರ್ಣ ಕಾಮಗಾರಿಯನ್ನು ಸಂಘಟಿತವಾಗಿ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಬಿ.ಸಿ.ರೋಡ್‍ನಿಂದ ಮಾಣಿ ವರೆಗಿನ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಸಾರ್ವಜನಿಕರ ತಾಳ್ಮೆ ಪರೀಕ್ಷಿಸಿ ಕಾಮಗಾರಿ ನಡೆಸುವುದು ಬೇಡ, ಕಳೆದ ಹಲವು ತಿಂಗಳಿಂದ ಬಸ್, ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯು ತನ್ನ ಸಂಪೂರ್ಣ ಸಾಮಥ್ಯ೯, ಮಾನವ ಸಂಪನ್ಮೂಲ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ಕಾಮಗಾರಿ ನಿರ್ವಹಿಸಬೇಕು. ಜುಲೈ 5 ರ ಒಳಗೆ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಜಂಕ್ಷನ್‍ನಲ್ಲಿ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಓಡಾಟಕ್ಕೆ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಗಡುವು ನೀಡಿದರು.
ತಲಪಾಡಿ – ಕಾಸರಗೋಡುವರೆಗೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಯಾವುದೇ ಸಮಸ್ಯೆಗಳಿಲ್ಲದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ವಹಿಸಿದೆ. ಇದೇ ಮಾದರಿಯನ್ನು ಅನುಸರಿಸಿ ಕಾಮಗಾರಿ ನಡೆಸುವಂತೆ ಅವರು ಸೂಚಿಸಿದರು.ಕಾರ್ಕಳ – ಮೂಡಬಿದ್ರೆ – ಮಂಗಳೂರು ಹೆದ್ದಾರಿಯಲ್ಲಿ ಚತುಷ್ಪಥ ಕಾಮಗಾರಿಯಲ್ಲಿ ಸಮಸ್ಯೆ ಇರುವ ಸ್ಥಳಗಳನ್ನು ಹೊರತುಪಡಿಸಿ ಉಳಿದೆಡೆ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಸಂಸದ ಬ್ರಿಜೇಶ್ ಚೌಟ ಸೂಚಿಸಿದರು.
ಮೂಡಬಿದ್ರೆ ಬೈಪಾಸ್ ನಿರ್ಮಾಣಕ್ಕೆ ಭೂಸ್ವಾಧೀನಗೊಂಡ ಜಮೀನನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಶೀಘ್ರವೇ ಹಸ್ತಾಂತರಿಸಲು ಅಧಿಕಾರಿಗಳಿಗೆ ತಿಳಿಸಿದರು. ಕೂಳೂರು ಸೇತುವೆ ಕಾಮಗಾರಿ ಹಾಗೂ ಹೊಸ ಸೇತುವೆ ಬಗ್ಗೆ ಸಂಸದರು ಮಾಹಿತಿ ಪಡೆದರು. ಕಾಮಗಾರಿ ಸದ್ಯಕ್ಕೆ ಸ್ಥಗಿತಗೊಂಡಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ ತಿಳಿಸಿದರು. ಇದೊಂದು ಗಂಭೀರ ವಿಷಯವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳ ಗಮನಕ್ಕೆ ತರಲು ಸಂಸದರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕೊಟ್ಟಾರ ಚೌಕಿ ಸರ್ವಿಸ್ ರಸ್ತೆ, ಕೆಪಿಟಿ ಓವರ್ ಪಾಸ್, ಪದವು ಜಂಕ್ಷನ್, ನಂತೂರು ಮೇಲ್ಸೇತುವೆ ಬಗ್ಗೆ ಪರಿಶೀಲನೆ ನಡೆಸಿದ ಅವರು ಈ ಬಗ್ಗೆ ಶೀಘ್ರವೇ ಪ್ರತ್ಯೇಕ ಸಭೆ ಕರೆದು ಎಲ್ಲಾ ಗೊಂದಲವನ್ನು ಬಗೆಹರಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು. ಕೆಪಿಟಿ ಜಂಕ್ಷನ್ ಕಾಮಗಾರಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ತಲಪಾಡಿ – ಹೆಜಮಾಡಿ ಸರ್ವಿಸ್ ರಸ್ತೆ :
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಲ್ಲಲ್ಲಿ ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ. ಆದರೂ ಹಲವು ಕಡೆ ಪ್ರತಿನಿತ್ಯ ಅಪಘಾತಗಳು ಸಂಭವಿಸಿ ಪ್ರಾಣ ಹಾನಿಗಳಾಗುತ್ತಿವೆ ಈ ನಿಟ್ಟಿನಲ್ಲಿ ತಲಪಾಡಿಯಿಂದ ಹೆಜಮಾಡಿವರೆಗೆ ಸಂಪೂರ್ಣವಾಗಿ ವ್ಯವಸ್ಥಿತವಾಗಿ ಸರ್ವೀಸ್ ರಸ್ತೆ ನಿರ್ಮಿಸುವ ಬಗ್ಗೆ ವರದಿ ತಯಾರಿಸಿ ಸಲ್ಲಿಸುವಂತೆ ಎನ್‍ಎಚ್‍ಎಐ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
ಬಿ.ಸಿ.ರೋಡ್‍ನಿಂದ ಸುರತ್ಕಲ್ ವರೆಗಿನ ಹೆದ್ದಾರಿಯನ್ನು ಪ್ರಸ್ತುತ ಹೆದ್ದಾರಿ ಪ್ರಾಧಿಕಾರವೇ ನಿರ್ವಹಿಸುತ್ತಿದೆ, ಈ ರಸ್ತೆಯ ನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅಸಮಾಧಾನವಿದೆ. ಈ ನಿಟ್ಟಿನಲ್ಲಿ ಇದರ ನಿರ್ವಹಣೆಯನ್ನು ಬೇರೆ ಏಜೆನ್ಸಿಗಳಿಗೆ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆ ಅವರು ಸೂಚಿಸಿದರು.
ಪೂಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿ ಕಾಮಗಾರಿ ಸಂದರ್ಭ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸ್ಥಳೀಯ ಗ್ರಾಮ ಪಂಚಾಯತಿಗಳಿಗೆ ಸರಿಯಾದ ಮಾಹಿತಿ ನೀಡಬೇಕು. ಸಮಸ್ಯೆಗಳನ್ನು ಸ್ಥಳೀಯವಾಗಿ ಬಗೆಹರಿಸಬೇಕು ಎಂದು ಅವರು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿ ಶಿವಪ್ರಸಾದ್ ಅಜಿಲ ಮಾತನಾಡಿ, ಇಲ್ಲಿ ಸುಗಮ ಸಂಚಾರಕ್ಕೆ ಬೇಕಾದ ತಾತ್ಕಾಲಿಕ ಕಾಮಗಾರಿಗಳನ್ನು ನಡೆಸಲಾಗಿದೆ. ಗುರುವಾಯನಕೆರೆ – ಉಜಿರೆ ವರೆಗೆ 9 ಕಿ.ಮೀ ಸರ್ವಿಸ್ ರಸ್ತೆಯು ಯೋಜನೆಯಲ್ಲಿದೆ. ಪ್ರಸ್ತುತ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾತನಾಡಿ, ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲಕರವಾಗುವಂತೆ ತಾತ್ಕಾಲಿಕ ವ್ಯವಸ್ಥೆಯನ್ನು ನಡೆಸಲಾಗಿದೆ. ಮಳೆಗಾಲದವರೆಗೆ ಈ ಹೆದ್ದಾರಿಯ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ, ಕೂಳೂರು ಹೊಸ ಸೇತುವೆ ಹಾಕಲಾದ ಮಣ್ಣನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಪ್ರೊಬೇಷನರಿ ಐಎಎಸ್ ಅಧಿಕಾರಿ ಪಿ.ಶ್ರವಣ್ ಕುಮಾರ್, ಮಹಾನಗರಪಾಲಿಕೆ ಆಯುಕ್ತ ಆನಂದ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.