ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರು ಹೆಸರು ನೋಂದಾವಣೆಗೆ ಸೂಚನೆ
ಬಂಟ್ವಾಳ:ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಕೃಷಿ ವಿಮಾ ಕಂಪೆನಿಯನ್ನು ನಿಗದಿಪಡಿಸಲಾಗಿದೆ ಎಂದು ಬಂಟ್ವಾಳ ಕೃಷಿ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನುನೋಂದಾಯಿಸಿಕೊಳ್ಳಬಹುದಾಗಿದೆ. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿ ಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪ,ಹವಾಮಾನ ವೈಪರೀತ್ಯದಿಂದಾಗಿ ಶೇ.75 ಕ್ಕಿಂತ ಹೆಚ್ಚು ಬಿತ್ತನೆ ವಿಫಲಗೊಂಡಲ್ಲಿ ವಿಮಾಮೊತ್ತದ ಗರಿಷ್ಟ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆವಿಮಾ ನಷ್ಟ ಪರಿಹಾರದಲ್ಲಿ ಶೇ.25ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ ಎಂದುಪ್ರಕಟಣೆ ತಿಳಿಸಿದೆ.
ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟಂತ ಸಂದರ್ಭದಲ್ಲಿ 2 ವಾರದೊಳಗೆ ಆಕಾಲಿಕ ಮಳೆ ,ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯುಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸುತ್ತದೆ ಎಂದು ಅವರ ಪ್ರಕಟಣೆ ತಿಳಿಸಿದೆ.
ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದುಂಟಾಗುವ ನಷ್ಟವನ್ನು ವೈಯುಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ.ಅರ್ಹ ರೈತರು ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾ ಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ 48 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ,ಪಾಣೆಮಂಗಳೂರು,ವಿಟ್ಲ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹಾಗಿದೆ ಎಂದು ಪ್ರಕಟಣೆ ತಿಳಿಸಿದೆ.