ಛೇ ಛೇ ಇದೆಂಥಾ ಮಾತು ಐವನ್ ಡಿಸೋಜ, ಕಾಂಗ್ರೆಸ್ ವಿರುದ್ಧ ಸಿಡಿದ ಸಿಟಿ ರವಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ರಾಜ್ಯ ಸರ್ಕಾರದ ನಡುವೆ ಯುದ್ಧ ಶುರುವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರ ಪರ ಹಾಗೂ ವಿರೋಧ ಮಾತುಕತೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಇದರ ನಡುವೆ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಇದರ ಭಾಗವಾಗಿ ದಕ್ಷಿಣ ಕನ್ನಡದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ವೇಳೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅವರು ರಾಜ್ಯಪಾಲರನ್ನು ಬಾಂಗ್ಲಾದೇಶದ ಪ್ರಧಾನಿಯನ್ನು ಇಳಿಸಿದ್ದಂತೆ ಇಳಿಸುತ್ತೇವೆ ಎಂದು ಹೇಳಿದ್ದಾರೆ. ಇದೀಗ ಇದಕ್ಕೆ ಸಿಟಿ ರವಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ಸಿನ ಹತಾಶ ಮನಸ್ಥಿತಿಗಳು ಹೇಗೆಲ್ಲ ಕಾರ್ಯಾಚರಿಸುತ್ತವೆ ಎಂಬುದನ್ನು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರು ಬಿಚ್ಚಿಟ್ಟಿದ್ದಾರೆ.
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಬಾಂಗ್ಲಾದೇಶದ ಮಾದರಿಯಲ್ಲಿ ಕೆಳಗಿಳಿಸುತ್ತೇವೆ ಎಂಬ ಹೇಳಿಕೆಯ ಹಿಂದಿನ ಮರ್ಮವೇನು? ರಾಜಭವನಕ್ಕೆ ಕಾಂಗ್ರೆಸ್ ಪುಡಾರಗಳನ್ನು ನುಗ್ಗಿಸುತ್ತೀರಾ?
ಕಾಂಗ್ರೆಸ್ ಶಾಸಕರ ಈ ಹೇಳಿಕೆಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಿಸಲಿ. ಕೂಡಲೇ ರಾಜ್ಯ ಪೋಲಿಸ್ ಇಲಾಖೆಯ ಮಹಾನಿರ್ದೇಶಕರು ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜ ಅವರ ವಿರುದ್ದ ದೂರುನ್ನು ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸುತ್ತೇನೆ.
ಇದನ್ನೂ ಓದಿ: ಮಂಗಳೂರು: ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತ ಪುಂಡಾಟ, ಬಸ್ಸಿಗೆ ಕಲ್ಲು ತೂರಾಟ
ಐವಾನ್ ಡಿಸೋಜಾ ಹೇಳಿದ್ದೇನು?
ಇಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ವೇಳೆ ಐವಾನ್ ಡಿಸೋಜಾ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಗಳು ವಾಪಸ್ ಕರೆಸಬೇಕು ಇಲ್ಲವಾದಲ್ಲಿ ಬಾಂಗ್ಲಾ ಪ್ರಧಾನಿಗೆ ಆದಂತೆ ರಾಜ್ಯಪಾಲರಿಗೂ ಆಗುತ್ತದೆ ಎಂದು ಹೇಳಿದ್ದಾರೆ.