ಮಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಇದೀಗ ಈ ಸಾಲಿನಲ್ಲಿ ಜಿಲ್ಲೆಯ ಲೋಕಸಭೆ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಕೂಡ ಒಬ್ಬರು. ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ನಿರಂತರ ಪ್ರತಿಭಟನೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಗೆ ಸಂದಿರುವ ದೊಡ್ಡ ಗೆಲುವು ಎಂದು ಹೇಳಿದ್ದಾರೆ. ತಮ್ಮ ರಾಜಕೀಯ ಬದುಕು ಯಾವುದೇ ಕಪ್ಪು-ಚುಕ್ಕೆಗಳಿಲ್ಲದ ತೆರೆದ ಪುಸ್ತಕ ಎಂಬುದಾಗಿ ಇಷ್ಟುದಿನ ಹೇಳಿಕೊಂಡು ತಿರುಗಾಡುತ್ತಿದ್ದ ಸಿಎಂ ಸಿದ್ದರಾಮಯ್ಯನವರ ನಿಜ ಬಣ್ಣ ಇಂದು ಕೋರ್ಟ್​​ನಲ್ಲಿ ಬಯಲಾಗಿದೆ. ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ಬೆತ್ತಲೆಯಾಗಿ ನಿಂತಿದ್ದಾರೆ ಎಂದು ಟೀಕಿಸಿದರು.

ಮೈಸೂರು ಮುಡಾ ಹಗರಣದಲ್ಲಿ ಅಕ್ರಮ ಎಸಗಿರುವುದಕ್ಕೆ ಹೈಕೋಟ್ ನೀಡಿರುವ ತೀರ್ಪಿಗಿಂತ ದೊಡ್ಡ ಸಾಕ್ಷ್ಯ ಬೇರೆ ಬೇಕಿಲ್ಲ. ಹೀಗಾಗಿ, ಸಿಎಂ ಸ್ಥಾನದಲ್ಲಿ ಮುಂದವರಿಯುವುದಕ್ಕೆ ಸಿದ್ದರಾಮಯ್ಯನವರಿಗೆ ಇನ್ನು ಯಾವುದೇ ನೈತಿಕತೆಯಿಲ್ಲ. ತಕ್ಷಣವೇ ಕರ್ನಾಟಕದ ಜನತೆ ಹಾಗೂ ಕಾನೂನಿಗೆ ಗೌರವ ಕೊಟ್ಟು ಸಿಎಂ ಸ್ಥಾನದಿಂದ ಇಳಿಯಬೇಕು ಎಂದು ಆಗ್ರಹಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರು ಹಾಗೂ ಅವರ ಬೆಂಬಲಿಗ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ಎಸಗಿದ್ದಾರೆ ಎಂಬುದನ್ನು ಬಿಜೆಪಿ ಪಕ್ಷ ಹಾಗೂ ಸಾಮಾಜಿಕ ಹೋರಾಟಗಾರರು ಆರಂಭದಿಂದಲೂ ಹೇಳಿಕೊಂಡು ಬಂದಿದ್ದಾರೆ. ಅದನ್ನೇ ರಾಜ್ಯಪಾಲರು ಕೂಡ ಈ ಬಗ್ಗೆ ದೂರು ಬಂದಾಗ ಕಾನೂನು ತಜ್ಞರ ಸಲಹೆ ಪಡೆದು ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರು. ಆಗಲೇ ಅವರು ರಾಜೀನಾಮೆ ಕೊಡಬೇಕಿತ್ತು. ಆದರೆ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಸಿಎಂ ಕುರ್ಚಿಗೆ ಅಂಟಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

By Suddi9

Leave a Reply

Your email address will not be published. Required fields are marked *