ಸಿಎಂಗೆ ಮತ್ತೊಂದು ಸಂಕಷ್ಟ, ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ ವಿಶೇಷ ನ್ಯಾಯಾಲಯ

ಮುಡಾ ಹಗರಣಕ್ಕೆ ಸಂಬಂಧಿಸದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸೆ.24ರಂದು ಅಂದರೆ ನೆನ್ನೆ ಕರ್ನಾಟಕ ಹೈಕೋರ್ಟ್ ಅವರು ಪ್ರಾಸಿಕ್ಯೂಷನ್ ವಿರೋಧಿಸಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಆರು ವಾರಗಳ ಒಳಗಾಗಿ ಸಿಆರ್ಪಿಸಿ ಸೆ.156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು. ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಆರ್ಪಿಸಿ ಕಾಯ್ದೆ ಉಲ್ಲೇಖಿಸಿ ತೀರ್ಪು ನೀಡಿದೆ.
ನ್ಯಾಯಾಲಯ ತನಿಖೆಗೆ ಆದೇಶ ನೀಡಿದ ನಂತರ ಮೈಸೂರು ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ. 156(3) ಅಡಿ ತನಿಖೆಗೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಬೇಕೆಂಬ ನಿಯಮವಿದೆ. ಒಂದು ವೇಳೆ ಎಫ್ಐಆರ್ ದಾಖಲಾದರೆ ಸಿದ್ದರಾಮಯ್ಯ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.