ಮಂಗಳೂರು: ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಇದೇ ಅಕ್ಟೋಬರ್ 21 ರಂದು ಉಪಚುನಾವಣೆ ನಡೆಯಲಿದೆ. ಈ ಪರಿಷತ್ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮ ಗೊಳಿಸಿದ್ದು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ನಾಮಪತ್ರ ಸಲ್ಲಿಸಲು ಎರಡು ದಿನ ಇರುವಾಗ ಕಿಶೋರ್ ಕುಮಾರ್ ಹೆಸರು ಘೋಷಣೆ ಮಾಡಿದ್ದು ಬಿಜೆಪಿ ಒಳಗಡೆಯೇ ಅಚ್ಚರಿ ಮೂಡಿಸಿದೆ. ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅ.21 ರಂದು ಉಪ ಚುನಾವಣೆ ನಡೆಯಲಿದ್ದು, ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ ಬಿಜೆಪಿ ಹೈಕಮಾಂಡಿನಿಂದ ಇಂದು ಹೆಸರು ಘೋಷಣೆಯಾಗಿದ್ದು, ಅಚ್ಚರಿ ಎನ್ನುವಂತೆ ಬಿಜೆಪಿಯಲ್ಲಿ ಸುದೀರ್ಘ ಅವಧಿಯಿಂದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದ ಕಿಶೋರ್ ಕುಮಾರ್ ಬೊಟ್ಯಾಡಿ ಆಯ್ಕೆಯಾಗಿದ್ದಾರೆ.