Published On: Thu, Oct 10th, 2024

ಮಂಗಳೂರು: ಉಪಚುನಾವಣಾ ಹಿನ್ನಲೆ ಅಕ್ಟೋಬರ್ 19ರಿಂದ 21ರವರೆಗೆ ನಿಷೇದಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ, ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶ ಹೊರಡಿಸಿದ್ದಾರೆ.

ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಹಾಗೂ ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿರ್ಬಂಧ ಹೇರಳಲಾಗಿದೆ.

ಮನುಷ್ಯ ಶವಗಳ ಅಥವಾ ಅವುಗಳ ಅಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಹಾಗೂ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿ ಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿರ್ಬಂಧಿಸಲಾಗಿದೆ.

ಈ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಕ್ರಮ ವಹಿಸಬೇಕು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನದ ದಿನದಂದು ಮತಗಟ್ಟೆಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಪೋನ್, ಕಾಡ್ರ್ಲೆಸ್ ಪೋನ್‌ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್/ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು/ಸಮುದಾಯ ಭವನಗಳು/ಹೋಟೆಲ್ ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಯು ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter