
ಕರ್ನಾಟಕದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ. ಮೂರು ವಿಧಾನ ಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದರಲ್ಲಿ ಭಾರಿ ಪೈಪೋಟಿ ನೀಡಿದ್ದು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ. ಸಿಪಿ ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿ, ಇದು ಪ್ರತಿಷ್ಠೆಯ ಗೆಲುವಾಗಿದೆ. ಇದೀಗ ಸಿಪಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ.
ಮೂರನೇ ಬಾರಿಗೆ ನಿಖಿಲ್ ಕುಮಾರಸ್ವಾಮಿ ಸೋತಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಇನ್ನು ಗೆಲುವು ಸಾಧಿಸಿದ ಬೆನ್ನಲ್ಲೇ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮತದಾರರಿಗೆ ಧನ್ಯವಾದ ಸಮರ್ಪಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಪ್ರತಿಷ್ಠೆಗೆ ಅವರ ಮಗ ನಿಖಿಲ್ ಬಲಿಯಾಗಿದ್ದಾರೆ. ಅವರಿಬ್ಬರೂ ತಮ್ಮ ಪ್ರತಿಷ್ಠೆಗೆ ಮಗನನ್ನೇ ಬಲಿಕೊಟ್ಟಿದ್ದಾರೆ ಎಂದು ಯೋಗೇಶ್ವರ್ ಹೇಳಿದ್ದಾರೆ. ಕುಮಾರಸ್ವಾಮಿ ಮನಸು ಮಾಡಿದ್ದರೆ ಮಗನನ್ನು ಮಂಡ್ಯದಲ್ಲಿ ಲೋಕಸಭೆ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಬಹುದಿತ್ತು. ಆದರೆ, ಕೇಂದ್ರ ಸಚಿವರಾಗುವ ತವಕದಿಂದ ತಾವೇ ಅಲ್ಲಿ ಸ್ಪರ್ಧಿಸಿದರು. ಮಗನನ್ನು ಬಲಿಕೊಟ್ಟರು ಎಂದು ಯೋಗೇಶ್ವರ್ ಟೀಕಿಸಿದರು.
