ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನಿಷೇಧ

ಸರ್ಕಾರ ಒಂದು ಮಹತ್ವದ ಸುತ್ತೋಲೆ ಹೊರಡಿಸಿದೆ. ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂದು ಆದೇಶ ನೀಡಿದೆ. ಜನವರಿ 31ರಂದೇ ಈ ಸುತ್ತೋಲೆ ಹೊರಡಿಸಲಾಗಿದ್ದು, ಪರ್ಯಾಯ ವ್ಯವಸ್ಥೆ ಬಗ್ಗೆಯೂ ಸಲಹೆ ನೀಡಲಾಗಿದೆ.
ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ನ ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.