ವಿದ್ಯಾರ್ಥಿಗಳಲ್ಲಿ ಸ್ವಂತಿಕೆಯಿರಲಿ: ಪ್ರೊ.ಸುಬ್ಬಪ್ಪ ಕೈಕಂಬ
ಬಂಟ್ವಾಳ: ಸಾಮಾಜಿಕಜಾಲ ತಾಣಗಳು ಹಾಗೂ ಬಹುಮಾಧ್ಯಮಗಳ ಕಾರಣದಿಂದಾಗಿ ಮಾಹಿತಿಯ ಮಹಾಪೂರವೇ ಬರುತ್ತಿರುವ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸ್ವಂತ ಚಿಂತನೆಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಹೇಳಿದರು.

ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು, ವಂಚನೆಯ ಮಾತುಗಳಿಗೆ ಬಲಿಯಾಗಬಾರದು ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಲಯನ್ಸ್ ವಲಯ ಸಲಹೆಗಾರ ಜಗದೀಶ್ ಕೊಯಿಲ ಮಾತನಾಡಿ ಸಮಾಜದಲ್ಲಿ ಹಾಸುಹೊಕ್ಕಾಗಿರುವ ಭ್ರಷ್ಟಾಚಾರವನ್ನು ನಿಗ್ರಹಿಸಲು ಯುವಜನರು ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಗಿರೀಶ ಭಟ್, ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಒಂದು ತಂಡವಾಗಿ ಕೆಲಸಮಾಡುವ ಹೊಂದಾಣಿಕೆಯ ಪ್ರವೃತ್ತಿಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಹರಿಪ್ರಸಾದ್ ಬಿ ಶೆಟ್ಟಿ ಮಾತನಾಡಿದರು. ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಯಶೋಧರ ಸ್ವಾಗತಿಸಿ, ಕಾರ್ಯದರ್ಶಿ ವಿಜಯೇಂದ್ರ ವಂದಿಸಿದರು. ಮೇಘಶ್ರೀ ಕಾರ್ಯಕ್ರಮ ನಿರೂಪಿಸಿದರು.



