ಬಂಟ್ವಾಳ: ಅಮ್ಟಾಡಿ ಗ್ರಾಮದ ಏರ್ಕುಲ ಪ್ರದೇಶದಲ್ಲಿ ಅನಧಿಕೃತ ಹಂದಿ ಸಾಕಾಣಿಕೆ ಕೇಂದ್ರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಹಂದಿ ಸಾಕಾಣಿಕೆ ಕೇಂದ್ರದಿಂದ ನಿರಂತರ ಗಬ್ಬು ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ನಾಗರಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಗ್ರಾಮಸ್ಥರು ಅಧಿಕಾರಿಗಳಲ್ಲಿ ದೂರಿದರು.
ತೆರೆದ ವಾಹನಗಳಲ್ಲಿ ತ್ಯಾಜ್ಯಗಳನ್ನು ಹಂದಿ ಸಾಕಾಣಿಕೆ ಕೇಂದ್ರಕ್ಕೆ ಸಾಗಿಸಲಾಗುತ್ತಿದ್ದು, ಪರಿಸರ ಮತ್ತಷ್ಟು ಮಾಲಿನ್ಯಗೊಳ್ಳುತ್ತಿದೆಯಲ್ಲದೆ ಸಮೀಪದಲ್ಲೇ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರವು ಇದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಾನಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಅನಧಿಕೃತವಾಗಿ ನಡೆಯುತ್ತಿರುವ ಈ ಹಂದಿ ಸಾಕಾಣಿಕೆ ಕೇಂದ್ರವನ್ನು ತಕ್ಷಣ ತೆರವುಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಪಿಡಿಒ ಅವರು, ಮೇಲಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
