ಬಂಟ್ವಾಳ: ತಾಲೂಕಿನ ಕಕ್ಯಪದವು ಸಮೀಪದ ಮೈರ ನಿವಾಸಿ, ಹತ್ಯೆಗೀಡಾದ ಯುವತಿ ಲಾವಣ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಬಿಜೆಪಿ ಮುಖಂಡರ ನಿಯೋಗ ಭಾನುವಾರ ಭೇಟಿ ನೀಡಿ ಹೆತ್ತವರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಯುವತಿ ಲಾವಣ್ಯಳ ಹತ್ಯೆಯನ್ನು ಖಂಡಿಸಿದ ನಿಯೋಗ ಈ ಕೃತ್ಯ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆಯಾಗಿದೆ. ಪ್ರಕರಣದ ಆರೋಪಿಗೆ ಕಾನೂನಿನಡಿ ಅತ್ಯಂತ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರಲ್ಲದೆ ಕುಟುಂಬಕ್ಕೆ ನ್ಯಾಯ ದೊರಕಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದ ಜನಪ್ರತಿನಿಧಿಗಳು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸರಕಾರ ಹಾಗೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಮೃತ ಲಾವಣ್ಯ ಅವರ ಆತ್ಮಕ್ಕೆ ಶಾಂತಿ ಕೋರಿ ಶೃದ್ದಾಂಜಲಿ ಅರ್ಪಿಸಿ ಶೋಕತಪ್ತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ತೀವ್ರ ದು:ಖ ತಂದಿದೆ:
ಶಾಸಕ ನಾಯ್ಕ್
“ಘಟನೆಯ ಸಂದರ್ಭದಲ್ಲಿ ನಾನು ಊರಿನಲ್ಲಿಲ್ಲದಿದ್ದು, ಒಡಿಶಾದ ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ಭಾಗಿಯಾಗಿದ್ದೆ. ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮತ್ತು ಸಮಗ್ರ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ.
