ಬಂಟ್ವಾಳ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ ಅಟಲ್ ವಯೋ ಅಭ್ಯುದಯ ಯೋಜನೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಹರಿಣಿ ಕುಮಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಮ್ತಾಜ್ ಹೆಚ್.ಐ. ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮೂಲಕ ದೊರೆಯುವ ವಿವಿಧ ಸೌಲಭ್ಯಗಳು ಹಾಗೂ ಸೇವೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಸದುಪಯೋಗ ಪಡಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮ ಮಾತನಾಡಿ, ಕುಟುಂಬದಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸಿದ ಸಂದರ್ಭದಲ್ಲಿ ಲಭ್ಯವಿರುವ ಕಾನೂನು ನೆರವು ಹಾಗೂ ಇಲಾಖಾ ಸೇವೆಗಳ ಕುರಿತು ಮಾಹಿತಿ ನೀಡಿದರಲ್ಲದೆ ಹಿರಿಯ ನಾಗರಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಆಪ್ತ ಸಮಾಲೋಚನಾ ವ್ಯವಸ್ಥೆಯನ್ನು ಬಳಸಿಕೊಳ್ಳಬೇಕು ಎಂದರು.
ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಆಪ್ತ ಸಮಾಲೋಚಕಿ ರಶ್ಮಿ ,ಕಾನೂನು ಸೇವೆಗಳ ಪ್ರಾಧಿಕಾರದ ಸಂಪನ್ಮೂಲ ವ್ಯಕ್ತಿ , ವಕೀಲ ಚಂದ್ರಶೇಖರ್ ರಾವ್ ಪುಂಚಮೆ ಮಾತನಾಡಿ, ಹಿರಿಯ ನಾಗರಿಕರು ಗೌರವಯುತವಾಗಿ ಬದುಕಲು ಕಾನೂನಿನಲ್ಲಿ ಕಲ್ಪಿಸಿರುವ ಹಕ್ಕುಗಳು ಮತ್ತು ಸೌಲಭ್ಯಗಳ ಕುರಿತು ವಿವರಿಸಿದರು.
ಕಾರ್ಮಿಕ ಇಲಾಖೆಯ ಅಧಿಕಾರಿ ಲವಿನ ಡಿಸೋಜಾ ಕಾರ್ಮಿಕ ಇಲಾಖೆಯ ಮೂಲಕ ಲಭ್ಯವಿರುವ ವಿವಿಧ ಸೇವೆ ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ, ತಾಲೂಕು ಅರೋಗ್ಯಧಿಕಾರಿ ಅಶೋಕ್ ಕುಮಾರ್ ರೈ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿನಯಕುಮಾರಿ, ವಿಕಾಸಂ ಫೌಂಡೇಶನ್ನ ಗಣೇಶ್ ಭಟ್ ಎಂ.ಆರ್.ಡಬ್ಲ್ಯು. ಗಿರೀಶ್ ಉಪಸ್ಥಿತರಿದ್ದರು.
ವಿಟ್ಲ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಕಾರ್ಯಕ್ರಮ ನಿರೂಪಿಸಿದರು. ಬಂಟ್ವಾಳ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಲಿನಿ ವಂದಿಸಿದರು
