ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕೇಪು ವಲಯದ 10 ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಕನ್ಯಾನದ ಶ್ರೀ ಗುರುದೇವ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಕೇಪು ವಲಯ ಅಧ್ಯಕ್ಷ ಗಣೇಶ್ ಮೈರುಗ ವಹಿಸಿದ್ದರು.

ಕಣಿಯೂರು ಚಾಮುಂಡೇಶ್ವರೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಅಭಿವೃದ್ಧಿ ಯಾಗಬೇಕಾದರೆ ಪ್ರತಿ ಹಳ್ಳಿಗಳು ಅಭಿವೃದ್ಧಿ ಹೊಂದಬೇಕು.ಈ ನಿಟ್ಟಿನಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ತಮ್ಮ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡುತ್ತಿದೆ ಎಂದರು.
ಒಡಿಯೂರು ಕ್ಷೇತ್ರದ ಸಾಧ್ವಿ ಶ್ರೀ ಮಾತಾನಂದಮಯಿ ಅವರು ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರಿಸಿ ಆಶೀರ್ವಚನ ನೀಡಿ, ಧರ್ಮಸ್ಥಳ ಹಾಗೂ ಒಡಿಯೂರು ಸಂಸ್ಥೆಗಳ ಮೂಲಕ ನಡೆಸುವಂತಹ ಯೋಜನೆಗಳು ದೇಶದ ಅಭಿವೃದ್ಧಿಯ ದೃಷ್ಟಿಯಲ್ಲಿ ಒಂದು ದೇಹದ ಎರಡು ಕಣ್ಣುಗಳಿದ್ದಂತೆ ಎಂದರು .
ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ 2 ರ ನಿರ್ದೇಶಕ ಬಾಬು ನಾಯ್ಕ ರವರು ಯೋಜನೆಯಿಂದ ಸಿಗುವ ಸೌಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಹಿ.ಜಾ.ವೇ.ಮುಖಂಡ ರಾಧಾಕೃಷ್ಣ ಅಡ್ಯಂತಾಯ,ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸತ್ಯನಾರಾಯಣ ಭಟ್ ಸೇರಾಜೆ, ಜನಜಾಗೃತಿ ವಲಯ ಅಧ್ಯಕ್ಷರಾದ ರಾಧಾಕೃಷ್ಣ ಚೆಲ್ಲಡ್ಕ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಸಮಿತಿ ಅಧ್ಯಕ್ಷ ನವೀನ್ ಚಂದ್ರ, ವಿನೋದ್ ಶೆಟ್ಟಿ ಪಟ್ಲಗುತ್ತು, ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಂತರ ಸದಸ್ಯರಿಂದ ಹಾಗೂ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
